ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಡ್ಯ ಜಿಲ್ಲೆ ಹಾಗೂ ಚಂದೂಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ 2024ರ ಸೆಪ್ಟೆಂಬರ್ 13 ಮತ್ತು 14 ರಂದು 2024 – 25 ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಮದ್ದೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಸೆಪ್ಟೆಂಬರ್ 13ರ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕ್ರೀಡಾಕೂಟವನ್ನು ಉದ್ಘಾಟಿಸುವರು. ಸಮಾರಂಭದಲ್ಲಿ ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹಾಗೂ ಮಂಡ್ಯ ಸಂಸದ ಹೆಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ತಿನ ಸದಸ್ಯರು ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಮಂಡ್ಯ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚಲುವಯ್ಯ, ಮದ್ದೂರು ತಾಲ್ಲೂಕಿನ ತಹಶೀಲ್ದಾರ್ ಜಿ.ಎಂ.ಸೋಮಶೇಖರ್ ಹಾಗೂ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಭಾಗವಹಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಮದ್ದೂರು ವಿಧಾನಸಭಾ ಕ್ಷೇತ್ರದ ಸದಸ್ಯ ಕೆ.ಎಂ ಉದಯ್ ವಹಿಸುವರು.
ಸೆಪ್ಟೆಂಬರ್ 14 ರಂದು ಸಂಜೆ 3 ಗಂಟೆಗೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ಸಂಘದ ಅಧ್ಯಕ್ಷ ಎಚ್. ನಿಂಗೇಗೌಡ ಸಮಾರೋಪ ಭಾಷಣವನ್ನು ಮಾಡಲಿದ್ದು, ಚಂದೂಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ. ಹನುಮಂತು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ನೋಡಲ್ ಅಧಿಕಾರಿಯಾದ ಎ.ಸಿ. ಗೀತಾ, ಮಂಡ್ಯ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳು ಉಪನ್ಯಾಸಕ ಸಂಘದ ಅಧ್ಯಕ್ಷರು ಚನ್ನಕೃಷ್ಣ, ಮದ್ದೂರು ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು ಎನ್. ಮಹಾದೇವ, ಎಂಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರು ಕೆ. ಸಿ. ಜೋಗಿಗೌಡ, ಎಸ್.ಐ. ಹೊನ್ನಲಗೆರೆಯ ಶಿವಲಿಂಗ ಶಿವಾಚಾರ್ಯ ಸ್ವಾಮಿ ಹಾಗೂ ಎಸ್.ಐ. ಹೊನ್ನಲಗೆರೆ ಗ್ರಾಮ ಪಂಚಾಯತಿಯ ಪದಾಧಿಕಾರಿಗಳು ಭಾಗವಹಿಸುವರು.
ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಮದ್ದೂರು ತಾಲ್ಲೂಕಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವರು. ಈ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳ ಸಮಾಗಮ, ಕ್ರೀಡಾಜ್ಯೋತಿ ಸ್ವೀಕಾರ, ಧ್ವಜಾರೋಹಣ ಹಾಗೂ ಧ್ವಜವಂದನೆ ಸ್ವೀಕಾರ, ವಿದ್ಯಾರ್ಥಿಗಳಿಂದ ಪಥ ಸಂಚಲನ ಮುಂತಾದ ಕಾರ್ಯಕ್ರಮಗಳು ಜರುಗಲಿವೆ ಎಂದು ಕ್ರೀಡಾಕೂಟದ ಆಯೋಜಕರು ತಿಳಿಸಿದ್ದಾರೆ.
