ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ವೈಯಕ್ತಿಕ ಕಾಳಜಿ ವಹಿಸಿ ನೇಮಕಾತಿಗೆ ಪ್ರಾಮಾಣ ಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಒಂದು ವಾರದೊಳಗೆ ಅತಿಥಿ ಉಪನ್ಯಾಸಕರ ಹತ್ತು ತಿಂಗಳ ಸಂಬಳ ಪಾವತಿಗೆ ಕ್ರಮವಹಿಸಲಾಗುವುದು. ಈ ಬಗ್ಗೆ ಇಲಾಖೆ ಆಯುಕ್ತರಿಗೆ ಮಾತನಾಡಿದ್ದು, ಕೂಡಲೇ ಉಪನ್ಯಾಸಕರ ಬೇಡಿಕೆ ಈಡೇರಿಸಲಾಗುವುದು,” ಎಂದರು.
ಕೇಂದ್ರದ ಅವೈಜ್ಞಾನಿಕ ಮಾನದಂಡಗಳಿಂದ ಸಿಂಧನೂರು ತಾಲೂಕು ಬರಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ. ಈಗಾಗಲೇ ಕಂದಾಯ ಸಚಿವರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದ್ದು, ಮೂರನೇ ಹಂತದಲ್ಲಿ ಸಿಂಧನೂರನ್ನು ಬರಗಾಲ ಪೀಡಿತ ತಾಲ್ಲೂಕನ್ನಾಗಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.
ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಅವವ್ಯಸ್ಥೆ ಮತ್ತು ವೈದ್ಯರು ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಹಾಗೂ ಖಾಸಗಿ ಕ್ಲಿನಿಕ್‌ಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ವೈದ್ಯರು ಯಾವುದೇ ಕಾರಣಕ್ಕೂ ಸೇವಾ ಅವಧಿಯೊಳಗೆ ಖಾಸಗಿಯಲ್ಲಿ ಕೆಲಸ ಮಾಡಬಾರದು. ಸಮಯಕ್ಕೆ ಸರಿಯಾಗಿ ಸೇವೆ ಸಲ್ಲಿಸಬೇಕು. ಈ ಬಗ್ಗೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಕೂಡಲೇ ಜನರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಆರ್.ಬಸನಗೌಡ ತುರವಿಹಾಳ ಉಪಸ್ಥಿತರಿದ್ದರು.