ಹಿಂದೂ ರಾಷ್ಟ್ರೀಯ ಜಾಗರಣ ಸಮಿತಿಯಿಂದ ಬೀದರ್ ನಗರದ ಸಾಯಿ ಶಾಲೆ ಮೈದಾನದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಹಿಂದೂ ಜಾಗೃತಿ ಬೃಹತ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.
ಹಿಂದೂ ಜಾಗೃತಿ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಬಿಜೆಪಿ ನಾಯಕಿ ಮಾಧವಿ ಲತಾ ಹಾಗೂ ಕಾಜಲ್ ಹಿಂದೂಸ್ತಾನಿ ಅವರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸುತ್ತಿದ್ದಾರೆ. ಆದರೆ, ಈ ಮೂವರು ಪ್ರಚೋದನಕಾರಿ ಭಾಷಣಕಾರರಾಗಿದ್ದಾರೆ. ಈ ಮೂವರ ವಿರುದ್ಧ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕಾನೂನು ಸುವ್ಯವಸ್ಥೆ ಹಿನ್ನಲೆ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿಯೂ ಆದ ಜಿ.ಪಂ.ಸಿಇಒ ಡಾ.ಗಿರೀಶ ಬದೋಲೆ ಆದೇಶದಲ್ಲಿ ತಿಳಿಸಿದ್ದಾರೆ.
ಡಿ.7 ಮಧ್ಯರಾತ್ರಿ 12.30 ರಿಂದ ಡಿ.9ರ ಬೆಳಿಗ್ಗೆ 6 ಗಂಟೆವರೆಗೆ ಸಾಯಿ ಶಾಲೆ ಮೈದಾನ 200 ಮೀ. ವ್ಯಾಪ್ತಿಯಲ್ಲಿ ಜನ ಗುಂಪು ಸೇರುವುದು, ಧಾರ್ಮಿಕ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ನಡೆಗೆ ಕಾರ್ಯಕ್ರಮ ಆಯೋಜಕರು ತುರ್ತು ಸುದ್ದಿಗೋಷ್ಠಿ ನಡೆಸಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಜಿಲ್ಲಾಡಳಿತ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ತಿಳಿಸಿದ್ದಾರೆ.