ಗುಜರಿ ವಸ್ತುಗಳನ್ನು ತುಂಬಿದ್ದ ಮಳಿಗೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿ ನಡೆದಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಮಳಿಗೆಯೊಳಗೆ ತುಂಬಿಟ್ಟಿದ್ದ ಹಳೆ ವಸ್ತುಗಳು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಬೆಂಕಿ ನಂದಿಸಿದ್ದಾರೆ. ಆದರೆ, ಆ ವೇಳೆಗೆ ಮಳಿಗೆಯಲ್ಲಿದ್ದ ವ್ಯಕ್ತಿ ಜೀವಂತವಾಗಿ ಸುಟ್ಟುಹೋಗಿದ್ದರು ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತನ ಶರೀರವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.