ತುಮಕೂರು | ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧುಬಂಗಾರಪ್ಪ

Date:

Advertisements

 ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು.

 ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

 ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಲ್ಯಾಬ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. 

Advertisements

 ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಪುಸ್ತಕ, ಶೂ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆಯಲ್ಲದೆ ಈಗಿರುವ ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಆಸಕ್ತಿ ತೋರುತ್ತಿದ್ದಾರೆ ಎಂದರು. 

1000988276

ಪ್ರಸಕ್ತ ವರ್ಷದಲ್ಲಿ ಪದವಿಪೂರ್ವ ಕಾಲೇಜುಗಳನ್ನೂ ಸಹ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಪದವಿಪೂರ್ವ ಕಾಲೇಜುಗಳಿಗೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುವುದೆಂದರು. 

 ಜಿಲ್ಲೆಯಲ್ಲಿ ಶತಮಾನ ಕಂಡ ಶಾಲೆಗಳನ್ನೂ ಸಹ ಅಭಿವೃದ್ಧಿಪಡಿಸಲಾಗುವುದು. ವಿಶೇಷ ಅನುದಾನದಡಿ ಶತಮಾನ ಕಂಡ ಶಾಲೆಗಳು ಮುಂದಿನ ಪೀಳಿಗೆಗೆ ಮಾದರಿಯಾಗುವಂತೆ ಉಳಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

 “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದಡಿ ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಲವಾರು ದಾನಿಗಳು ಆರ್ಥಿಕ ನೆರವು ನೀಡಲು ಮುಂದೆ ಬರುತ್ತಿದ್ದಾರೆ. ಶಾಲಾ ಪೀಠೋಪಕರಣ, ಲೇಖನ ಸಾಮಗ್ರಿ, ಸ್ಮಾರ್ಟ್ ತರಗತಿ ನಿರ್ಮಾಣಕ್ಕೆ ಸಹಾಯಹಸ್ತ ನೀಡುತ್ತಿದ್ದಾರೆ. ಅಲ್ಲದೆ ಈ ಕಾರ್ಯಕ್ರಮಕ್ಕೆ ಸಿಎಸ್‌ಆರ್ ನಿಧಿಯಿಂದ 1591 ಕೋಟಿ ರೂ.ಗಳನ್ನು ಸದ್ವಿನಿಯೋಗಿಸಲಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳೂ ಸಹ ತಾವು ಓದಿದ ಶಾಲೆಗಳ ಅಭಿವೃದ್ಧಿಗಾಗಿ ಕೊಡುಗೆಯನ್ನು ನೀಡಲು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

 ಜಿಲ್ಲೆಯು ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಹಿಂದುಳಿದಿದ್ದು, ಫಲಿತಾಂಶದ ಶೇಕಡಾ ಪ್ರಮಾಣವನ್ನು ಉನ್ನತ ಮಟ್ಟಕ್ಕೆ ಏರಿಸಲು ಶಿಕ್ಷಕರು, ಅಧಿಕಾರಿಗಳು ಶ್ರಮಿಸಬೇಕೆಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಶಾಲೆ ಹಾಗೂ ಶಿಕ್ಷಕರ ಕಾರ್ಯಕ್ಷಮತೆ ಹೆಚ್ಚಿಸುವ, ಅನುಭವಾತ್ಮಕ ಕಲಿಕೆಗಾಗಿ ರೂಪಿಸಿರುವ ವಿನೂತನ ಕಾರ್ಯಕ್ರಮಗಳ ಮೂಲಕ ಜಿಲ್ಲೆಯು ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ. ಈ ಕಾರ್ಯಕ್ರಮಗಳನ್ನು ಇತರೆ ಜಿಲ್ಲೆಗಳಿಗೆ ವಿನೂತನ ಕಾರ್ಯಕ್ರಮಗಳನ್ನು ವಿಸ್ತರಿಸಲಾಗುವುದೆಂದರು. 

ರಾಜ್ಯದಲ್ಲಿ ಇಂಗ್ಲೀಷ್ ಮಾಧ್ಯಮದ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ದ್ವಿಭಾಷಾ ಶಾಲೆಗಳನ್ನು ತೆರೆಯಲಾಗುವುದು. ಈಗಿರುವ ಕನ್ನಡ ಮಾಧ್ಯಮದ ಶಾಲೆಗಳು ದ್ವಿಭಾಷಾ ಶಾಲೆಗಳನ್ನಾಗಿ ಮಾರ್ಪಡಿಸಲಾಗುವುದು ಎಂದು ಹೇಳಿದರು. 

ಇದಕ್ಕೂ ಮುನ್ನ ನಡೆದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಪ್ರಗತಿ ಮಾಹಿತಿಯನ್ನು ಸಚಿವರಿಗೆ ತಿಳಿಸುತ್ತಾ, ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ವಸತಿ ಶಾಲೆ ಸೇರಿದಂತೆ ಒಟ್ಟು 3873 ಶಾಲೆಗಳಿದ್ದು, 2,10,183 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದರಲ್ಲದೆ, ಜಿಲ್ಲೆಗೆ ಮಂಜೂರಾದ ಶಿಕ್ಷಕರ, ಕಾರ್ಯನಿರ್ವಹಿಸುತ್ತಿರುವ ಹಾಗೂ ಖಾಲಿ ಹುದ್ದೆಗಳ ಅಂಕಿ-ಅಂಶಗಳ ಮಾಹಿತಿ ನೀಡಿದರು. 

1000988273

ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 435 ಶಾಲೆಗಳಿಗೆ ಆವರಣಗೋಡೆ, 550 ಶೌಚಾಲಯ, 247 ಶಾಲಾ ಆಟದ ಮೈದಾನಗಳನ್ನು ನಿರ್ಮಿಸಲಾಗಿದ್ದು, 1347 ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 479 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಸರ್ಕಾರದಿಂದ 71 ಕೋಟಿ ರೂ.ಗಳ ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು. 

ನರೇಗಾ ಯೋಜನೆಯಡಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ಗುಲಾಬಿ ಬಣ್ಣದ ಹಾಗೂ ವಿದ್ಯಾರ್ಥಿಗಳಿಗಾಗಿ ನೀಲಿ ಬಣ್ಣದ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಿ 24*7 ನೀರು ಪೂರೈಕೆ ಇರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. 

ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಶಾಲಾ ಕೊಠಡಿ ಮೇಲ್ಛಾವಣಿ, ಗೋಡೆ ರಿಪೇರಿ, ನೆಲಹಾಸು, ಸುಣ್ಣ-ಬಣ್ಣ ಸೇರಿ 967 ಕೊಠಡಿಗಳ ದುರಸ್ತಿಗಾಗಿ 19.34 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೇ ಶಿಥಿಲಾವಸ್ಥೆಯಲ್ಲಿರುವ 556 ಶಾಲಾ ಕೊಠಡಿಗಳನ್ನು ನೆಲಸಮಗೊಳಿಸಿ 1086 ಕೊಠಡಿಗಳನ್ನು ನೆಲಸಮಗೊಳಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು. 

ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ನಕಲನ್ನು ತಡೆಗಟ್ಟಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ವೆಬ್‌ಕಾಸ್ಟಿಂಗ್ ಪದ್ಧತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸಿದರೆ ಅವರ ಮುಂದಿನ ಭವಿಷ್ಯ ಉತ್ತಮವಾಗಲಿದೆ ಎಂಬ ಉದ್ದೇಶದಿಂದ ಈ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದೆ. ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿಕೊಳ್ಳಲು ಶಾಲೆಗಳು ಪರೀಕ್ಷಾ ನಕಲಿಗೆ ಅವಕಾಶ ಮಾಡಿಕೊಡಬಾರದು. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವೆಬ್‌ಕಾಸ್ಟಿಂಗ್ ಪದ್ಧತಿಯಿಂದ ಮಕ್ಕಳಲ್ಲಿಯೂ ಕಲಿಕಾ ಸಾಮರ್ಥ್ಯ ಹೆಚ್ಚಾಗಿದೆಯಲ್ಲದೆ, ಪೋಷಕರಿಗೂ ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಮೂಡಿದೆ ಎಂದು ತಿಳಿಸಿದರು. 

1000988274

ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲು ಅಧಿಕಾರಿಗಳು ಶಾಲೆಗಳಿಗೆ ಖುದ್ದು ಭೇಟಿ ನೀಡಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಬಗ್ಗೆ ಪರಿಶೀಲಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಗುರುತರ ಜವಾಬ್ದಾರಿಯಾಗಿದೆ. ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೋಷಕರು ಹಾಗೂ ಶಿಕ್ಷಕರು ಯಾವುದೇ ರೀತಿಯಲ್ಲಿ ಮಾನಸಿಕವಾಗಿ ಕುಗ್ಗಿಸುವಂತಿಲ್ಲ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಶಿಕ್ಷಕರು ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರಲ್ಲದೆ, ಶಿಕ್ಷಕರು ತಮ್ಮ ಹುದ್ದೆಯೊಂದಿಗೆ ಇತರೆ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಬಾರದು. ಪಡೆಯುವ ವೇತನಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.

ಅಧಿಕಾರಿಗಳು ವಿದ್ಯಾರ್ಥಿಗಳಿಗನುಗುಣವಾಗಿ ಪುಸ್ತಕ, ಸಮವಸ್ತç, ಶೂಗಳ ಬೇಡಿಕೆ ಸಲ್ಲಿಸಬೇಕು. ಹೆಚ್ಚುವರಿ ಬೇಡಿಕೆ ಸಲ್ಲಿಸಿ ವ್ಯರ್ಥವಾಗದಂತೆ ನಿಗಾವಹಿಸಬೇಕು ಎಂದು ಸಲಹೆ ನೀಡಿದರು. 

ಸಭೆಯಲ್ಲಿ ಶಾಸಕ ಸುರೇಶ್ ಗೌಡ, ಡಿಡಿಪಿಐಗಳಾದ ಮನಮೋಹನ ಹಾಗೂ ಗಿರಿಜಾ, ಡಯಟ್ ಪ್ರಾಂಶುಪಾಲ ಮಂಜುನಾಥ, ಡಿಡಿಪಿಯು ಬಾಲಗುರುಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು. 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X