ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಆರಾಧ್ಯ ದೈವ ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ-2024ವನ್ನು ಫೆಬ್ರವರಿ 26ರಿಂದ ಮಾರ್ಚ್ 12ರವರೆಗೆ 16 ದಿನಗಳ ಕಾಲ ಶ್ರೀಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಗಂಗಾ ವಸ್ತು ಪ್ರದರ್ಶನ ಟ್ರಸ್ಟ್‌ನ ಕಾರ್ಯದರ್ಶಿ ಗಂಗಾಧರಯ್ಯ ಹೇಳಿದರು.
ಜಂಟಿ ಕಾರ್ಯದರ್ಶಿಗಳಾದ ಎಸ್. ಶಿವಕುಮಾರ್ ಹಾಗೂ ಕೆಂ ಬ ರೇಣುಕಯ್ಯ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಈ ಬಾರಿಯ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಸಂಸ್ಥೆಗಳು ಸೇರಿದಂತೆ ಒಟ್ಟು 170ಕ್ಕೂ ಅಧಿಕ ಮಳಿಗೆಗಳನ್ನು ತೆರೆಯಲಾಗುತ್ತಿದೆ” ಎಂದು ಹೇಳಿದರು.
“ಅಯೋಧ್ಯೆಯ ರಾಮ ಮಂದಿರ ಮಾದರಿ ಕೂಡ ಈ ಬಾರಿಯ ವಸ್ತುಪ್ರದರ್ಶನದಲ್ಲಿ ಪ್ರದರ್ಶನಗೊಳ್ಳತ್ತಿರುವುದು ವಿಶೇಷವಾಗಿದೆ. ಇದಕ್ಕಾಗಿ ಈಗಾಗಲೇ ಅಗತ್ಯ ಸಿದ್ದತೆಗಳು ಪೂರ್ಣಗೊಂಡಿವೆ” ಎಂದರು.
“ಈ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯ, ಕೃಷಿ ಜೀವಂತ ಪ್ರಾತ್ಯಕ್ಷಿಕ ಹಾಗೂ ತಾಂತ್ರಿಕತೆ ಬಳಕೆಯ ಪ್ರದರ್ಶನ, ಅರಣ್ಯ ಸ್ವಾಭಾವಿಕ ಅರಣ್ಯದ ದೃಶ್ಯ, ಶಿಕ್ಷಣ ಇಲಾಖೆ, ಪಶು ಸಂಗೋಪನಾ ಇಲಾಖೆ, ಕೃಷಿ ಇಲಾಖೆ, ರೇಷ್ಮೆ ಇಲಾಖೆ ಹಾಗೂ ಬೆಂಗಳೂರಿನ ವಾರ್ತಾ ಇಲಾಖೆ ಸೇರಿದಂತೆ 20ಕ್ಕೂ ಅಧಿಕ ಸರ್ಕಾರಿ ಇಲಾಖೆಗಳು ಹಾಗೂ 150ಕ್ಕೂ ಹೆಚ್ಚು ಖಾಸಗಿ ವಾಣಿಜ್ಯ ಮಳಿಗೆಗಳು ಸೇರಿ ಒಟ್ಟು 170ಕ್ಕೂ ಅಧಿಕ ಮಳಿಗೆಗಳನ್ನು ತೆರೆದು ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನೀಡಲಾಗುವುದು” ಎಂದು ಹೇಳಿದರು.
“ಈ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನವು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಳೆದ 59 ವರ್ಷಗಳಿಂದಲೂ ನಡೆಯುತ್ತಾ ಬಂದಿದ್ದು, ವಸ್ತುಪ್ರದರ್ಶನವು 60ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಈ ವಸ್ತುಪ್ರದರ್ಶನದಲ್ಲಿ ಮಳಿಗೆಗಳನ್ನು ತೆರೆಯುವವರಿಗೆ ಪ್ರತಿನಿತ್ಯ ಊಟದ ವ್ಯವಸ್ಥೆ ಇರುತ್ತದೆ. ಪ್ರತಿನಿತ್ಯ 16 ದಿನಗಳ ಕಾಲ ಸಂಜೆ ಪೌರಾಣಿಕ ನಾಟಕ ಪ್ರದರ್ಶನ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ” ಎಂದು ತಿಳಿಸಿದರು.
ವಸ್ತುಪ್ರದರ್ಶನಕ್ಕೆ ಚಾಲನೆ
“ಫೆಬ್ರವರಿ 26ರ ಸಂಜೆ 7ಕ್ಕೆ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ದಿವ್ಯಾಶೀರ್ವಾದದೊಂದಿಗೆ ಹಾಗೂ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಉದ್ಘಾಟನಾ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಗ್ರಾಮಾಂತರ ಶಾಸಕ ಬಿ ಸುರೇಶ್‌ಗೌಡ ಅಧ್ಯಕ್ಷತೆ ವಹಿಸುವರು. ಕೃಷಿ ಸಚಿವ ಚಲುವರಾಯಸ್ವಾಮಿ ವಸ್ತುಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.
“ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್, ಸಹಕಾರ ಸಚಿವ ಕೆ ಎನ್ ರಾಜಣ್ಣ, ಸಂಸದ ಜಿ ಎಸ್ ಬಸವರಾಜು, ಶಾಸಕ ಜಿ ಬಿ ಜ್ಯೋತಿಗಣೇಶ್ ಪಾಲ್ಗೊಳ್ಳುವರು” ಎಂದು ತಿಳಿಸಿದರು.
“ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ, ಮಹಾನಗರ ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ ಭಾಗವಹಿಸಲಿದ್ದಾರೆ” ಎಂದು ಅವರು ವಿವರಿಸಿದರು.
ಈ ಸುದ್ದಿ ಓದಿದ್ದೀರಾ? ಸಂವಿಧಾನ ಜಾಥಾ; ತುಮಕೂರಿಗೆ ಪ್ರಥಮ ಸ್ಥಾನ
“16 ದಿನಗಳ ಕಾಲ ನಡೆಯಲಿರುವ ಈ ಕೃಷಿ ಮತ್ತು ವಸ್ತು ಪ್ರದರ್ಶನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಳ್ಳಬೇಕು” ಎಂದು ಅವರು ಮನವಿ ಮಾಡಿದರು.
ಸುದ್ದಿಗೋಷ್ಯಟಿಯಲ್ಲಿ ಸಹಾಯಕ ಜಂಟಿ ಕಾರ್ಯದರ್ಶಿ ಶೇಷಭೂಷಣ್ ಇದ್ದರು.