ಭಾರತದ ಚುನಾವಣಾ ಆಯೋಗ ನಿರ್ದೇಶನದಂತೆ ಜಿಲ್ಲೆಯಲ್ಲಿಯೂ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಬುಧವಾರ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧತೆ ಕುರಿತು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು ದೇಶದಾದ್ಯಂತ ಮತದಾರರ ಪಟ್ಟಿಯನ್ನು ಹೆಚ್ಚು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಈ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವನ್ನು ತುಮಕೂರು ಜಿಲ್ಲೆಯಲ್ಲೂ ನಡೆಸಲಾಗುವುದು ಎಂದು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಯಶಸ್ವಿಯಾಗಲು ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವೆಂದು ತಿಳಿಸಿದರಲ್ಲದೆ, ರಾಜಕೀಯ ಪಕ್ಷಗಳು ತಮ್ಮ ವ್ಯಾಪ್ತಿಯ ಮತಗಟ್ಟೆ ಮಟ್ಟದ ಏಜೆಂಟ್ಗಳನ್ನು ನೇಮಕ ಮಾಡುವ ಮೂಲಕ ಈ ಪರಿಷ್ಕರಣಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ವಿಶೇಷ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಅರ್ಹ ಮತದಾರರ ಹೆಸರನ್ನು ತಪ್ಪದೇ ಮತದಾರರ ಪಟ್ಟಿಗೆ ಸೇರಿಸುವುದು ಹಾಗೂ ಅನರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವುದು ಈ ಪರಿಷ್ಕರಣಾ ಕಾರ್ಯದ ಉದ್ದೇಶವಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಮತಗಟ್ಟೆ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ತೆರಳಿ ನಿಗದಿತ ಅರ್ಜಿ ನಮೂನೆಯನ್ನು ವಿತರಿಸಬೇಕು. ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಹಿಂದಿರುಗಿಸುವ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ನಂತರ ಕರಡು ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗುವುದು. ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ತಿದ್ದುಪಡಿಗಳಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ಸರಿಪಡಿಸಿಕೊಳ್ಳಲು ಅವಕಾಶವಿರುತ್ತದೆ. ಸ್ವೀಕೃತವಾಗುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿದ ನಂತರವೇ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸೆಪ್ಟೆಂಬರ್ 30ರಿಂದ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯ ಪ್ರಾರಂಭವಾಗಲಿದ್ದು, ಅರ್ಹ ಪದವೀಧರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಾಸಿಸುವ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯಬೇಕು. ಮತದಾರರ ಪಟ್ಟಿಯಿಂದ ಯಾರೂ ವಂಚಿತರಾಗಬಾರದು ಹಾಗೂ ಅನರ್ಹ ವ್ಯಕ್ತಿಗಳ ಹೆಸರು ಸೇರಬಾರದು. ಇದರಿಂದ ಮುಂಬರುವ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸಲು ಸಾಧ್ಯ ಎಂದು ತಿಳಿಸಿದರು.
ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಅನಿತಾಲಕ್ಷ್ಮೀ, ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.