ತುಮಕೂರು | ಒಂದೂವರೆ ತಿಂಗಳಿಂದ ನೀರಿಗೆ ಪರದಾಟ; ಜಿಲ್ಲಾಧಿಕಾರಿ ಬಳಿ ಸಂಕಷ್ಟ ತೋಡಿಕೊಂಡ ಜನ

Date:

Advertisements

ಕಳೆದ ಒಂದೂವರೆ ತಿಂಗಳಿಂದ ನೀರಿಲ್ಲದೆ ಬವಣೆಯ ಬದುಕು ಸಾಗಿಸುತ್ತಿದ್ದೇವೆ. ನೀರಿಲ್ಲದೆ ಅಡುಗೆ, ಸ್ವಚ್ಛತಾ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ತುಮಕೂರು ಜಿಲ್ಲೆಯ ಮಾಳಿಗೆಹಟ್ಟಿಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ನೀರಿನ ಸಂಕಷ್ಟವನ್ನು ಎಳೆ ಎಳೆಯಾಗಿ ವಿವರಿಸಿದರು.

ಶಿರಾ ತಾಲೂಕು ಬುಕ್ಕಪಟ್ಟಣ ಹೋಬಳಿ ಕುರುಬರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಮಾಳಿಗೆಹಟ್ಟಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬರಪರಿಸ್ಥಿತಿ ಪರಿವೀಕ್ಷಿಸಲು ಬೆಳ್ಳಂಬೆಳಗ್ಗೆಯೇ (ಮಾ.2) ಭೇಟಿ ನೀಡಿ ಮಾಳಿಗೆಹಳ್ಳಿಯ ಗ್ರಾಮಸ್ಥರ ತಮ್ಮ ಸಮಸ್ಯೆಗಳನ್ನು ಆಲಿಸಿದರು.

ಅಹವಾಲು ಆಲಿಸಿದ ಜಿಲ್ಲಾಧಿಕಾರಿಗಳು, ಕಳೆದ ಒಂದೂವರೆ ತಿಂಗಳಿಂದ ನೀರಿಗಾಗಿ ಜನರು ಪಡುತ್ತಿರುವ ಕಷ್ಟ ಅಧಿಕಾರಿಗಳಿಗೆ ಕಾಣಲಿಲ್ಲವೇ? ಕುಡಿಯುವ ನೀರಿನ ಸಮಸ್ಯೆ ತಲೆದೋರಿದ ಕೂಡಲೇ ಎಸ್‌ಡಿಆರ್‌ಎಫ್ ಹಣದಿಂದ ತುರ್ತು ಕಾಮಗಾರಿ ಕೈಗೊಳ್ಳಬೇಕೆಂದು ನಿರ್ದೇಶನವಿದ್ದರೂ ಏಕೆ ಕ್ರಮ ಕೈಗೊಂಡಿಲ್ಲವೆಂದು ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡರು. ಕೂಡಲೇ ಟ್ಯಾಂಕರ್‌ನಿಂದ ನೀರಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.

Advertisements

ಮಾಳಿಗೆಹಟ್ಟಿ ಗ್ರಾಮದ ಮಹಿಳೆಯರು ನೀರಿನ ಸಮಸ್ಯೆಯಿಂದ ಮಕ್ಕಳಿಗೆ ಹೊತ್ತಿಗೆ ಸರಿಯಾಗಿ ಊಟವಿಲ್ಲದಂತಾಗಿದೆ. ವಾರಕ್ಕೊಮ್ಮೆ ಸ್ನಾನ ಮಾಡುವ ಪರಿಸ್ಥಿತಿ ಎದುರಾಗಿದೆ. ಮನೆಯಲ್ಲಿ ನೀರಿಲ್ಲದೆ ಯಾವ ಕೆಲಸವೂ ಮಾಡಲಾಗುತ್ತಿಲ್ಲ. ಬೆಳಗಿನಿಂದ ನೀರು ಹೊಂಚಲು ಶುರುವಾದರೆ ಹೊತ್ತೇರಿದರೂ ಒಂದೆರಡು ಕೊಡ ನೀರು ಸಿಗುತ್ತದೆ ಎಂದು ಜಿಲ್ಲಾಧಿಕಾರಿಗಳ ಬಳಿ ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಹೇಳಿಕೊಂಡರು.

ಇದಕ್ಕೂ ಮುನ್ನ ಶಿರಾ ತಾಲೂಕು ಗೌಡಗೆರೆ ಹೋಬಳಿ ತಾವರೆಕೆರೆ, ಬುಕ್ಕಾಪಟ್ಟಣ ಹೋಬಳಿ ನೇರಳೆಗುಡ್ಡ ಗ್ರಾಮ ಪಂಚಾಯತಿ ಉಡಪಕಲ್ ತಾಂಡ ಹಾಗೂ ಕುರುಬರಹಳ್ಳಿ ಗ್ರಾಮ ಪಂಚಾಯತಿ ಬಂಗಾರಿಗೊಲ್ಲರಹಟ್ಟಿ, ಪುರ ಗ್ರಾಮಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳು ಪರಿವೀಕ್ಷಿಸಿದರು.

ಉಡಪಕಲ್ ತಾಂಡಾದಲ್ಲಿ ನೀರಿನ ಅಭಾವ ನೀಗಿಸಲು ಖಾಸಗಿ ಕೊಳವೆ ಬಾವಿ ಮಾಲೀಕರೊಂದಿಗೆ ನೀರು ಸರಬರಾಜು ಮಾಡಲು ಕರಾರು ಒಪ್ಪಂದ ಮಾಡಿಕೊಳ್ಳಲಾಗಿದೆ. ಗ್ರಾಮಕ್ಕೆ ನೀರು ಪೂರೈಕೆ ಮಾಡಲು ಪೈಪ್‌ಲೈನ್ ಅಳವಡಿಸಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬರಕತ್ ಅಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಗ್ರಾಮದಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕರಿಗೆ ಮೇವಿನ ಕಿಟ್ ವಿತರಿಸಬೇಕೆಂದು ಸೂಚನೆ ನೀಡಿದಾಗ ಉತ್ತರಿಸಿದ ಸಹಾಯಕ ನಿರ್ದೇಶಕ ಡಾ.ಸಿ.ಎಸ್. ರಮೇಶ್ ಅವರು ಶಿರಾ ತಾಲೂಕಿನಲ್ಲಿ ಅಂದಾಜು 2 ತಿಂಗಳಿಗಾಗುವಷ್ಟು ಮೇವಿನ ಲಭ್ಯತೆಯಿದೆ. ಈಗಾಗಲೇ 8572 ಮೇವಿನ ಕಿರು ಪೊಟ್ಟಣಗಳನ್ನು  5272 ಫಲಾನುಭವಿಗಳಿಗೆ ವಿತರಿಸಲಾಗಿದ್ದು, ತೆರೆದ/ಕೊಳವೆ ಬಾವಿ, ನೀರಿನ ಸೌಲಭ್ಯ ಹೊಂದಿರುವ ರೈತರಿಗೆ ಆದ್ಯತೆ ಮೇಲೆ ಮೇವಿನ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಂತರ ಪುರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಕ್ರಮಕೈಗೊಳ್ಳಬೇಕೆಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ತಿಪ್ಪಸ್ವಾಮಿ ಅವರಿಗೆ ಸೂಚಿಸಿದಾಗ ನೆನ್ನೆಯಷ್ಟೆ ಶಾಸಕ ಸುರೇಶ್ ಬಾಬು ಅವರು ತಾವರೆಕೆರೆ-ಬುಕ್ಕಪಟ್ಟಣ ರಸ್ತೆಯಿಂದ ಮಾಳಿಗೆ ಹಟ್ಟಿ ಮಾರ್ಗ ಲಿಂಗಶೆಟ್ಟಿ ಹಳ್ಳಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ್ದು, ಕಾಮಗಾರಿಯ ಟೆಂಡರು ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರವೇ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಕುಡಿಯುವ ನೀರಿನ ಸಮಸ್ಯೆ, ಜಾನುವಾರು ಮೇವು ಕೊರತೆಗೆ ಸಂಬಂಧಿಸಿದಂತೆ ಕಳೆದ ಮಾಹೆಯಿಂದ ಜಿಲ್ಲೆಯ ತುಮಕೂರು, ಚಿಕ್ಕನಾಯಕನಹಳ್ಳಿ, ಕೊರಟಗೆರೆ ಹಾಗೂ ಮಧುಗಿರಿ ತಾಲ್ಲೂಕಿನ ಗ್ರಾಮಗಳಲ್ಲಿ ಸಂಚರಿಸಿ ಬರ ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಎಲ್ಲ ತಾಲೂಕುಗಳಿಗಿಂತ ಶಿರಾ ತಾಲೂಕಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿ ಹೆಚ್ಚಾಗಿ ಕಂಡು ಬಂದಿದ್ದು, ಅಧಿಕಾರಿಗಳು ಸಮರ್ಪಕವಾಗಿ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಬೇಕೆಂದು ಸೂಚನೆ ನೀಡಿದರು.

ಪುರ ಗ್ರಾಮದಲ್ಲಿ ಸ್ವಚ್ಛತೆಯಿಲ್ಲದಿರುವುದನ್ನು ಕಂಡ ಜಿಲ್ಲಾಧಿಕಾರಿಗಳು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಅಧಿಕಾರಿಗಳು ಗ್ರಾಮದ ಮನೆ-ಮನೆಗೂ ಭೇಟಿ ನೀಡಿ ಸ್ವಚ್ಛತೆ ಹಾಗೂ ವೈಯಕ್ತಿಕ ಶೌಚಾಲಯ ಬಳಸುವ ಬಗ್ಗೆ ಅರಿವು ನೀಡಬೇಕು. ಈ ನಿಟ್ಟಿನಲ್ಲಿ ಐ.ಇ.ಸಿ(ಮಾಹಿತಿ, ಶಿಕ್ಷಣ, ಸಂವಹನ) ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ನಿರ್ದೇಶನ ನೀಡಿದರು.

ಹೊಸದಾಗಿ ಕೊರೆದ ಕೊಳವೆ ಬಾವಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ ಮೋಟಾರ್ ಪಂಪನ್ನು ಅಳವಡಿಸಬೇಕು. ಸಾರ್ವಜನಿಕರ ಹಿತದೃಷ್ಠಿಯಿಂದ ಬಾಡಿಗೆ ಆಧಾರದ ಮೇಲೆ ನೀರು ನೀಡುವ ಖಾಸಗಿ ಕೊಳವೆ ಬಾವಿಗಳಿಗೆ ನಿರಂತರ ಜ್ಯೋತಿಯಡಿ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ಸೂಚನೆ ನೀಡಿದರು.

ಬಂಗಾರಿಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದಾಗ ಖಾಸಗಿ ಕೊಳವೆ ಬಾವಿಯಿಂದ ಗ್ರಾಮಕ್ಕೆ ನೀರು ಪೂರೈಕೆಯಾಗುತ್ತಿರುವ, ಶಾಲಾ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ವಿತರಿಸುತ್ತಿರುವ ಹಾಗೂ ಮಳೆಯ ಅಭಾವದಿಂದ ತಾಲೂಕಿನಲ್ಲಿ ಕುಂಠಿತಗೊAಡಿರುವ ಕೃಷಿ ಬಿತ್ತನೆ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ನೀಡಿದರು.

ಒಗ್ಗೂಡಿ ಕೆಲಸ ಮಾಡಲು ಸೂಚನೆ

ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಮಾತನಾಡಿ, ಅಧಿಕಾರಿಗಳು ಕಚೇರಿ ಕೆಲಸದ ಸಮಯಕ್ಕೂ ಮುನ್ನ ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು. ತಾಲೂಕಿನಲ್ಲಿ ಸಮಸ್ಯೆಗಳು ಸೃಷ್ಟಿಯಾಗದಂತೆ ಕಾರ್ಯವಹಿಸಬೇಕು. ಎಲ್ಲ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಿದರೆ ಮಾತ್ರ ಪ್ರಗತಿ ಸಾಧ್ಯ. ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಸ್ಥಳಕ್ಕೆ ಭೇಟಿ ನೀಡಿ ಬಗೆಹರಿಸಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಅದ್ಯಕ್ಷ ತಿಮ್ಮಕ್ಕ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಾವರಿ ನಾಯಕ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಹನುಮಂತಪ್ಪ, ಬೆಸ್ಕಾಂ ಇಂಜಿನಿಯರ್, ವಿವಿಧ ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳು ಸೇರಿದಂತೆ ಮತ್ತಿತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X