ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಮಹಿಳಾ ಅಭಿವೃದ್ಧಿಗೆ ಪೂರಕವಾಗಿದ್ದು, ಮಹಿಳೆಯರನ್ನೂ ಸ್ವಾವಲಂಭಿಗಳನ್ನಾಗಿ ಮಾಡಲು ಸರ್ಕಾರ ಶ್ರಮಿಸುತ್ತಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ ಅಭಿಪ್ರಾಯ ಪಟ್ಟರು.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸಂಯುಕ್ತಾಶ್ರಯದಲ್ಲಿ ಪುರಸಭೆಯ ಮಾಲಿ ಮರಿಯಪ್ಪ ರಂಗಮಂದಿರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಕ್ರಮವಹಿಸಲಾಗಿದೆ ಎಂದ ಅವರು, ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36ಸಾವಿರ ಕೋಟಿ ಹಣವನ್ನು ನೀಡಲಾಗಿದ್ದು, ಮುಂದಿನ ವರ್ಷ 58 ಸಾವಿರ ಕೋಟಿ ಹಣವನ್ನು ಯೋಜನೆಗಳಿಗಾಗಿ ಖರ್ಚು ಮಾಡಲಾಗುವುದು ಎಂದು ತಿಳಿಸಿದರು.
ಮಹಿಳೆಯರು ರಾಜಕೀಯ ಕ್ಷೇತ್ರದಲ್ಲಿ ಪಾಲ್ಗೊಳ್ಳಬೇಕು ಎಂಬ ಉದ್ದೇಶದಿಂದ ಸ್ಥಳೀಯ ಆಡಳಿತದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ವಿಧಾನ ಸಭೆ ಮತ್ತು ಲೋಕ ಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಮಹಿಳೆಯರು ತಮ್ಮ ಹಕ್ಕುಗಳ ರಕ್ಷಣೆಗಾಗಿ ನೂರಾರು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಅವರ ಹೋರಾಟಗಳಿಂದ ಅನೇಕ ಹೆಣ್ಣು ಮಕ್ಕಳು ನೆಮ್ಮದಿಯ ಜೀವನ ಸಾಗಿಸುವಂತಾಗಿದೆ. ನಮ್ಮ ಸರ್ಕಾರ ಮಹಿಳಾ ಅಭಿವೃದ್ಧಿಗಾಗಿ ಯಾವಾಗಲೂ ಸಿದ್ದವಿರುತ್ತದೆ ಎಂದು ಹೇಳಿದರು.
ಸಹಕಾರ ಸಚಿವ ಕೆ.ಎನ್. ರಾಜಣ್ಣ, ಮಹಿಳೆ ತನ್ನ ಕುಟುಂಬದ ಸರ್ವೊತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಾಳೆ, ಮಹಿಳೆಯ ಶ್ರಮಕ್ಕೆ ಬೆಲೆ ಕಟ್ಟಲಾಗದು. ನಮ್ಮ ಸರ್ಕಾರವೂ ಕೂಡ ಮಹಿಳಾ ಅಭಿವೃದ್ಧಿಗೆ ಪೂರಕವಾಗಿವೆ. ಗೃಹಲಕ್ಷ್ಮಿ ಯೋಜನೆಯಲ್ಲಿ 68,62,86,000 ಹಣವನ್ನು ತಾಲೂಕಿನ ಮಹಿಳೆಯರಿಗೆ ನೀಡಲಾಗಿದೆ ಎಂದು ತಿಳಿಸಿದರು.
ಅನೇಕರು ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನೂ ಸ್ಥಗಿತಗೊಳಿಸಲಾಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ, ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುತ್ತವೆ. ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದರೂ ಸಹ ಸರ್ಕಾರ ಉತ್ತಮ ರೀತಿಯಲ್ಲಿ ಬರ ನಿರ್ವಹಣೆ ಮಾಡುತ್ತಿದೆ ಎಂದರು.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ, ಒಂದು ಊರು ಅಭಿವೃದ್ಧಿ ಹೊಂದಿದೆ ಎಂದು ತಿಳಿಯಬೇಕೆಂದರೆ, ಊರಿನ ಮಹಿಳೆಯರ ಸ್ಥಿತಿಗತಿಯನ್ನು ಗಮನಿಸಬೇಕು. ದೇಶ ಅಭಿವೃದ್ಧಿಯಾಗಬೇಕೆಂದರೆ ದೇಶದ ಮಹಿಳೆಯರು ಅಭಿವೃದ್ಧಿ ಆಗಬೇಕು. ಹೆಣ್ಣು ಮಕ್ಕಳು ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಉತ್ತಮ ಸ್ಥಾನಕ್ಕೆ ತಲುಪಬೇಕು ಎಂದರು.
ಮಹಿಳಾ ಆಯೋಗವು ತಮ್ಮ ಹಕ್ಕುಗಳಿಂದ ವಂಚಿತರಾದ ಮಹಿಳೆಯರಿಗೆ ನ್ಯಾಯವನ್ನು ದೊರಕಿಸಿ ಕೊಡುವ ಕೆಲಸ ಮಾಡಿಕೊಂಡು ಬರುತ್ತಿದೆ. ಮಹಿಳೆಯರು ಯಾವುದಾದರೂ ಕಿರುಕುಳಕ್ಕೆ ಅಥವಾ ಸಮಸ್ಯೆಗೆ ಸಿಲುಕ್ಕಿದ್ದರೆ ಆಯೋಗವನ್ನು ಸಂಪರ್ಕಿಸಬೇಕು. ಆಯೋಗ ಯಾವಾಗಲೂ ನಿಮ್ಮ ಜೊತೆಯಲ್ಲೇ ಇರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.