ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ ಸುಮಾರು 187 ಕೋಟಿ ಹಣದ ದುರುಪಯೋಗವನ್ನು ಖಂಡಿಸಿ, ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ರದ್ದು ಮಾಡಲು ಒತ್ತಾಯಿಸಿ ಜುಲೈ 18ರ ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.
ತುಮಕೂರು ತಾಲೂಕಿನ ಹೆಬ್ಬೂರಿನ ಕೆ.ಎಸ್.ಪುಟ್ಟಣ್ಣಯ್ಯ ರೈತ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ, ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಸೇರಿದಂತೆ ಕೊಟ್ಟ ಮಾತಿಗೆ ತಪ್ಪಿದೆ. ಅಲ್ಲದೇ, ಸರ್ಕಾರದ ನೀತಿಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸರಕಾರವನ್ನು ಮತ್ತೊಮ್ಮೆ ಎಚ್ಚರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ರೈತ ಸಂಘದ ಕಾರ್ಯಕರ್ತರು ಜುಲೈ 18ರ ಮಂಗಳವಾರ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಿದ್ದಾರೆ” ಎಂದರು.
ತುಮಕೂರು ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಅರಣ್ಯ ಇಲಾಖೆ ಮತ್ತು ಬಗರ್ ಹುಕ್ಕಂ ಸಾಗುವಳಿದಾರರ ನಡುವಿನ ಸಂಘರ್ಷ ಹೆಚ್ಚಾಗಿದೆ. ಹತ್ತಾರು ವರ್ಷಗಳಿಂದಲೂ ಭೂಮಿ ಉಳುಮೆ ಮಾಡುತ್ತಾ ಬಂದಿದ್ದರೂ ಒಂದಿಲ್ಲೊಂದು ಕಾರಣ ನೀಡಿ, ಸಾಗುವಳಿ ಚೀಟಿ ನೀಡುತ್ತಿಲ್ಲ. ಅಲ್ಲದೇ, ವಿವಿಧ ಕಾರಣಗಳಿಂದ ರಾಜ್ಯದಲ್ಲಿ ಕಳೆದ ಏಪ್ರಿಲ್ನಿಂದ ಇಲ್ಲಿಯವರೆಗೂ 1182 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ದೊಡ್ಡ ಆತಂಕ ಸೃಷ್ಟಿಸಿದೆ. ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಲೆ ಸಿಗದಿರುವುದು ರೈತರ ಆತ್ಮಹತ್ಯೆಯ ಹಿಂದಿನ ಪ್ರಮುಖ ಕಾರಣವಾಗಿದೆ. ಇದನ್ನು ತಡೆಯಲು ಸರ್ಕಾರ ಕೃಷಿ ಬೆಲೆ ನಿಗದಿ ಆಯೋಗದ ಶಿಫಾರಸ್ಸುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಬರಗಾಲದ ನಡುವೆಯೂ ಬ್ಯಾಂಕುಗಳು ಸಾಲ ವಸೂಲಿಗೆ ರೈತರ ಜಮೀನುಗಳನ್ನು ಹರಾಜು ಹಾಕುತ್ತಿರುವುದು ಮುಂದುವರೆದಿದೆ. ಇದು ನಿಲ್ಲಬೇಕು ಎಂಬುದು ರೈತ ಸಂಘದ ಪದಾಧಿಕಾರಿಗಳ ಒಕ್ಕೊರಲ ಒತ್ತಾಯವಾಗಿದೆ ಎಂದು ಗೋವಿಂದರಾಜು ತಿಳಿಸಿದರು.
ರಾಜ್ಯದ ಹಾಗೂ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಜುಲೈ 18ರ ಮಂಗಳವಾರ ಕರೆದಿರುವ ರಾಜ್ಯಾದ್ಯಂತ ಪ್ರತಿಭಟನೆಯಲ್ಲಿ ರೈತರು,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರಕಾರಕ್ಕೆ ಒಂದು ಸ್ಪಷ್ಟ ಸಂದೇಶ ನೀಡಬೇಕೆಂಬುದು ರಾಜ್ಯ ರೈತ ಸಂಘದ ಮನವಿಯಾಗಿದೆ ಎಂದು ಎ.ಗೋವಿಂದರಾಜು ತಿಳಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ ಮಾತನಾಡಿ, “ಪಹಣಿ, ದುರಸ್ತಿ, ಪಕ್ಕಾಪೋಡು, ಹದ್ದುಬಸ್ತು, ನೋಂದಣಿ ಶುಲ್ಕ ಎಲ್ಲವೂ ದುಬಾರಿಯಾಗಿದೆ. ಕೂಡಲೇ ವಾಪಸ್ ಪಡೆಯಬೇಕು. ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಹೈನುಗಾರರಿಗೆ ಕಡಿತ ಮಾಡಿರುವ ಹಾಲಿನ ದರವನ್ನು ಮರು ಸ್ಥಾಪಿಸಬೇಕು. ನ್ಯಾಪೆಡ್ ಮೂಲಕ ಖರೀದಿಸಿರುವ ರಾಗಿ, ಕೊಬ್ಬರಿಯ ಪ್ರೋತ್ಸಾಹ ದನ ಬಿಡುಗಡೆ ಮಾಡಬೇಕು, ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂಬುದು ರೈತ ಸಂಘದ ಆಗ್ರಹವಾಗಿದೆ. ಇದರ ಜೊತೆಗೆ, ತುಮಕೂರು ಜಿಲ್ಲೆಗೆ ಮಾರಕವಾಗಿರುವ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ರದ್ದು ಮಾಡಬೇಕೆಂಬುದು ಜಿಲ್ಲೆಯ ರೈತರ ಆಗ್ರಹವಾಗಿದೆ” ಎಂದರು.
ಇದನ್ನು ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ದಾಖಲೆ ಮಾಡಿಸಿಕೊಳ್ಳಲು ಅಲೆಮಾರಿ ಕುಟುಂಬಗಳ ಪರದಾಟ; ಕೇಳೋರಿಲ್ಲ ಇವರ ಕಷ್ಟ!
ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ತಾಲೂಕು ಅಧ್ಯಕ್ಷರುಗಳಾದ ಚಿಕ್ಕಬೋರೇಗೌಡ, ವೆಂಕಟೇಗೌಡ, ಲೋಕೇಶ್, ಶಬ್ಬೀರ್ ಅಹಮದ್, ಶ್ರೀನಿವಾಸ್, ತಿಮ್ಮೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ರವೀಶ್, ಲೋಕೇಶ್ ಹಾಗೂ ಎಲ್ಲ ತಾಲೂಕು ಪ್ರತಿನಿಧಿಗಳು ಭಾಗವಹಿಸಿದ್ದರು.
