ಮಹಿಳೆಯೊಬ್ಬರು ತನ್ನ ಇಬ್ಬರು ವಿಶೇಷಚೇತನ ಮಕ್ಕಳನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಆದಲಗೆರೆ ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಅವರು ತಮ್ಮ ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತ ಮಕ್ಕಳನ್ನು ಚೂಡಾಮಣಿ (23) ಮತ್ತು ನರಸಿಂಹರಾಜು (14) ಎಂದು ಗುರುಸಲಾಗಿದೆ.
ಪತಿ ಮಹದೇವಯ್ಯ ಅವರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಘಟನೆ ಜರುಗಿದೆ ಎಂದು ವರದಿಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಮಕ್ಕಳು ಅಂಗ ವೈಕಲ್ಯಕ್ಕೆ ತುತ್ತಾಗಿರುವುದರಿಂದ ಮನನೊಂದು ವಿಜಯಲಕ್ಷ್ಮಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.