ತುಮಕೂರು ಜಿಲ್ಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ 400 ರಿಂದ 500 ಜನ ರೈತರನ್ನು ಗುರುತಿಸಿ ಅವರಿಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡುವ ಮೂಲಕ ಪ್ರಸಕ್ತ ಆರ್ಥಿಕ ವರ್ಷದಲ್ಲಿ 1 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಗುರಿಯನ್ನು ತಲುಪಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ತಾಂತ್ರಿಕ ಸಿಬ್ಬಂದಿಗಳೊಂದಿಗೆ ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಮಾನವ ದಿನಗಳ ಸೃಜನೆಯಲ್ಲಿ ಜಿಲ್ಲೆಯು ಮೊದಲ ಸ್ಥಾನ ಪಡೆದಿದೆ. ಈ ವರ್ಷವೂ ಮೊದಲ ಸ್ಥಾನವನ್ನು ಯಥಾರೀತಿ ಕಾಪಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.

ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳನ್ನು ಪ್ರಾರಂಭಿಸಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕು. ರೈತರು ತಮ್ಮ ಜಮೀನುಗಳಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕಳೆದ ವರ್ಷ ಸುಮಾರು 122 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿದ್ದ 3660 ಶಾಲಾಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಾದ ಚರಂಡಿ, ರಸ್ತೆ, ಸ್ಮಶಾನ, ಕೆರೆಗಳ ಅಭಿವೃದ್ಧಿ; ನಾಲೆಗಳ ನಿರ್ಮಾಣ, ಗೋದಾಮು, ಸಂಜೀವಿನ ಭವನ, ಗ್ರಾಮ ಪಂಚಾಯತಿ ಕಟ್ಟಡ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಸೂಚಿಸಿದರು.

ಸಭೆಯಲ್ಲಿ ಉಪ ಕಾರ್ಯದರ್ಶಿಗಳಾದ ಕೆ.ಪಿ. ಸಂಜೀವಪ್ಪ ಹಾಗೂ ಹಾಲಸಿದ್ದಪ್ಪ ಪೂಜೇರಿ, ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ವಿವಿಧ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು(ಗ್ರಾಉ) ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.