ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಆರಂಭವಾಗಿದ್ದು, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ನಗರದ ಸರ್ಕಾರಿ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಕಾಳಿದಾಸ ನಗರದ ಪದವಿ ಪೂರ್ವ ಕಾಲೇಜು ಹಾಗೂ ಸಿದ್ದಗಂಗಾ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಭಯ ಬೇಡ
ಪರೀಕ್ಷೆಗೂ ಮುನ್ನ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಮಕ್ಕಳು ಯಾವುದೇ ರೀತಿ ಭಯ ಪಡದೆ ಧೈರ್ಯವಾಗಿ ಪರೀಕ್ಷೆಯನ್ನು ಬರೆಯಬೇಕು. ಉನ್ನತ ವ್ಯಾಸಂಗಕ್ಕೆ ದ್ವಿತೀಯ ಪಿಯುಸಿ ತರಗತಿ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ತರಗತಿ ವಿಷಯಗಳನ್ನು ಅಭ್ಯಾಸ ಮಾಡಿ ಹೆಚ್ಚಿನ ಅಂಕಗಳನ್ನು ಗಳಿಸಬೇಕೆಂದು ಹಾರೈಸಿದರು.
ಸಿಇಒ ಭೇಟಿ
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ನಗರದ ಸರ್ವೋದಯ ಪದವಿ ಪೂರ್ವ ಕಾಲೇಜು ಹಾಗೂ ಸಿದ್ದಗಂಗಾ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
1067 ವಿದ್ಯಾರ್ಥಿಗಳು ಗೈರು
ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಕನ್ನಡ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 23130 ವಿದ್ಯಾರ್ಥಿಗಳ ಪೈಕಿ 22063 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1067ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಯಾವುದೇ ಕೇಂದ್ರದಲ್ಲಿ ಡಿಬಾರ್ ಪ್ರಕರಣ ವರದಿಯಾಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.