ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಅಕ್ಟೋಬರ್ 13ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕನಾಯಕನಹಳ್ಳಿ ಠಾಣೆ ಪೊಲೀಸರು ಭಾನುವಾರ ಕಾರವಾರ ಜಿಲ್ಲೆಯ ದಾದಾಪೀರ್ (40) ಅವರನ್ನು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಸಲು ಗ್ರಾಮದ ಶಿವು (40) ಕೊಲೆಯಾದವರು. ದಾದಾಪೀರ್ ಅವರು ಸುಮಾರು 15 ದಿನಗಳ ಹಿಂದೆ ಚಿಕ್ಕನಾಯಕನಹಳ್ಳಿಯಲ್ಲಿರುವ ತಮ್ಮ ತಂಗಿಯ ಮನೆಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಅಕ್ಟೋಬರ್ 13ರಂದು ರಾತ್ರಿ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದ್ದ ಗಲಾಟೆಯ ಸಂದರ್ಭದಲ್ಲಿ ಶಿವು ಅವರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಶಿವು, ದಾದಾಪೀರ್ ಬಳಿ ಬೀಡಿ ಕೇಳಿದ್ದು, ಅವರು ನೀಡದಿದ್ದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ಗಲಾಟೆಯೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





