ಗೌರಿಬಿದನೂರು ಪಟ್ಟಣದಲ್ಲಿ ಹಿರಿಯ ವಕೀಲ ಸಣ್ಣಕ್ಕಿ ಅವರ ಮೇಲೆ ನಡೆದ ಚೂರಿ ಇರಿತ ಹಾಗೂ ಮಾರಣಾಂತಿಕ ಹಲ್ಲೆ ಖಂಡಿಸಿ, ಗುಬ್ಬಿ ಜೆಎಂಎಫ್‌ಸಿ ನ್ಯಾಯಾಲಯದ ವಕೀಲರು ಬುಧವಾರ ನ್ಯಾಯಾಲಯದ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ವಿವಿಧ ಭಾಗಗಳಲ್ಲಿ ವಕೀಲರ ಮೇಲೆ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ವರದಿಯಾಗುತ್ತಿದ್ದು, ವೃತ್ತಿಯ ಕರ್ತವ್ಯ ನಿರ್ವಹಿಸುವ ವಕೀಲರ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಾಗಿದೆ. ಕಕ್ಷಿದಾರರ ಪರವಾಗಿ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸುವ ವಕೀಲರು ದ್ವೇಷ ಮತ್ತು ವೈಷಮ್ಯದಿಂದ ಹಲ್ಲೆಗೊಳಗಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ವಕೀಲರು ಅಭಿಪ್ರಾಯಪಟ್ಟರು.
ವಕೀಲರ ರಕ್ಷಣಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ವಕೀಲರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಗೌರಿಬಿದನೂರಿನಲ್ಲಿ ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಹಲವು ವಕೀಲರು ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ನ್ಯಾಯಾಲಯದಿಂದ ಹೊರನಡೆದರು.





