ಎನ್‌ಸಿಸಿ ಮತ್ತು ಕ್ರೀಡಾ ಕ್ಷೇತ್ರದ ಮಾದರಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸ್ವಯಂಸೇವಕ ವಿದ್ಯಾರ್ಥಿಗಳಿಗೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ, ಅವರ ನಿಸ್ವಾರ್ಥ ಸೇವೆಯನ್ನು ಸರ್ಕಾರ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಒತ್ತಾಯಿಸಿದರು.
ಕೊರಟಗೆರೆ ತಾಲೂಕಿನ ತಂಗನಹಳ್ಳಿ ಶ್ರೀ ಕಾಶಿ ಅನ್ನಪೂರ್ಣೇಶ್ವರಿ ಮಠದ ಸಮುದಾಯ ಭವನದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಗಾಂಧಿ ತತ್ವ ಪ್ರಣೀತ ಯುವಜನ ಶಾಂತಿ ಮತ್ತು ಸೇವಾ ಯೋಜನಾ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಎನ್‌ಎಸ್‌ಎಸ್ ಯುವಜನರಲ್ಲಿ ಸೇವಾ ಮನೋಭಾವ, ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ವಿದ್ಯಾರ್ಥಿಗಳ ಸೇವೆ ಅಮೂಲ್ಯವಾಗಿದ್ದು, ಅದಕ್ಕೆ ಸೂಕ್ತ ಮನ್ನಣೆ ದೊರೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿ.ಬಿ. ಕವಿತ, ಮಮತಾ ಸೇರಿದಂತೆ ಹಲವು ಗಣ್ಯರು, ಉಪನ್ಯಾಸಕರು ಹಾಗೂ ರಾಜ್ಯದ ವಿವಿಧ ಭಾಗಗಳ ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಭಾಗವಹಿಸಿದ್ದರು.



