ಮಧುಗಿರಿ ತಾಲೂಕಿನ ಜನತೆಯ ಬಹುಕಾಲದ ಕನಸಾಗಿದ್ದ ತುಮಕೂರು–ರಾಯದುರ್ಗ ಹೊಸ ರೈಲ್ವೆ ಮಾರ್ಗ ಯೋಜನೆಯಡಿ ನಿರ್ಮಾಣಗೊಳ್ಳಲಿರುವ ಮಧುಗಿರಿ ರೈಲ್ವೆ ನಿಲ್ದಾಣ ಹಾಗೂ ಸರಕು ಸಾಗಾಣಿಕೆ ವಿಭಾಗದ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಮತ್ತು ಶಾಸಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.
ಪಟ್ಟಣದ ಹೊರವಲಯದ ಕೊಡಿಗೇನಹಳ್ಳಿ ರಸ್ತೆಯ ಹೊಸ ಆರ್‌ಟಿಒ ಕಚೇರಿ ಹಿಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಾಯಿತು. ಈ ರೈಲ್ವೆ ನಿಲ್ದಾಣ ಮತ್ತು ಸರಕು ಸಾಗಾಣಿಕೆ ಕೇಂದ್ರ ನಿರ್ಮಾಣದಿಂದ ಮಧುಗಿರಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ.ಎನ್. ರಾಜಣ್ಣ, ತುಮಕೂರು–ರಾಯದುರ್ಗ ರೈಲ್ವೆ ಮಾರ್ಗವು ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ಕೈಗಾರಿಕೆ, ವ್ಯಾಪಾರ ಹಾಗೂ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನುಕೂಲವಾಗಲಿದೆ ಎಂದು ಹೇಳಿದರು. ಈ ಯೋಜನೆಯಿಂದ ಪ್ರದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದ್ದು, ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದು ತಿಳಿಸಿದರು.
ಮಧುಗಿರಿ ರೈಲ್ವೆ ನಿಲ್ದಾಣ ನಿರ್ಮಾಣವು ತಾಲೂಕು ಜನರ ದೀರ್ಘಕಾಲದ ಬೇಡಿಕೆಯಾಗಿದ್ದು, ಯೋಜನೆ ಸಾಕಾರಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ರೈಲ್ವೆ ಮುಖ್ಯ ಇಂಜಿನಿಯರ್ ಪ್ರಸಾದ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಸೀಲ್ದಾರ್ ನಂದಿನಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ. ರಾಜಣ್ಣ, ಗುತ್ತಿಗೆದಾರ ರಾಜ್‌ಗೋಪಾಲ್ ಸೇರಿದಂತೆ ರೈಲ್ವೆ ಇಲಾಖೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.




