ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ‘ಯುವ ಸಂಸತ್ತು–2026’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅಣಕು ವಿಧಾನಸಭೆ ಅಧಿವೇಶನ ನಡೆಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅನಾವರಣಗೊಳಿಸಿದರು. ವಿವಿಧ ಇಲಾಖೆಗಳ ಸಮಸ್ಯೆಗಳು, ಸರ್ಕಾರದ ಯೋಜನೆಗಳು ಹಾಗೂ ಜನರ ಮೂಲಭೂತ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ಸದನದಲ್ಲಿ ಗಂಭೀರ ಚರ್ಚೆ ನಡೆಸಿದರು.
ಅಣಕು ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪದವಿ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ, ಬರ ಪರಿಸ್ಥಿತಿಯಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆ, ಕ್ರಿಮಿನಾಶಕಗಳ ಲಭ್ಯತೆ, ಕೃಷಿ ಪಂಪ್‌ಸೆಟ್‌ಗಳು, ನೀರಾವರಿ ಯೋಜನೆಗಳು, ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಸ್ಥೆ ಹಾಗೂ ಬೆಳೆ ವಿಮೆ ವಿಚಾರಗಳನ್ನು ಪ್ರಸ್ತಾಪಿಸಲಾಯಿತು.
ಶೂನ್ಯ ವೇಳೆಯಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನವೂ ನಡೆಯಿತು. ಅನ್ನಭಾಗ್ಯ, ಶಕ್ತಿ ಯೋಜನೆ, ವಸತಿ ಸೌಲಭ್ಯ, ಆರೋಗ್ಯ ಮತ್ತು ಗೃಹ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಯಿತು. ಕುಡಿಯುವ ನೀರಿನ ಸಮಸ್ಯೆಯ ತೀವ್ರತೆಯನ್ನು ಸರ್ಕಾರದ ಗಮನಕ್ಕೆ ತರಲಾಯಿತು.
ನಂತರ ಸರ್ಕಾರ ವಿಧೇಯಕಗಳನ್ನು ಮಂಡಿಸಲು ಮುಂದಾದಾಗ ವಿರೋಧ ಪಕ್ಷದ ಸದಸ್ಯರು ಅವಕಾಶ ನೀಡದೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸ್ಪೀಕರ್ ಮನವಿ ಮಾಡಿದರೂ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸದನದಿಂದ ಹೊರನಡೆದರು. ಸರ್ಕಾರಕ್ಕೆ ಬಹುಮತವಿದ್ದ ಕಾರಣ ಮಸೂದೆಗಳು ಅಂಗೀಕಾರಗೊಂಡವು. ಬಳಿಕ ಸ್ಪೀಕರ್ ಸದನವನ್ನು ಮರುದಿನಕ್ಕೆ ಮುಂದೂಡಿದರು.
ಬಸವಣ್ಣನವರ ಅನುಭವ ಮಂಟಪವೇ ಸಂಸತ್ತಿಗೆ ಪ್ರೇರಣೆ
ಮಧುಗಿರಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾನೂನು ಸೇವೆ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ನ್ಯಾಯಾಧೀಶರಾದ ಸುಮಂಗಲ ಎಸ್. ಬಸವಣ್ಣೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತದ ಸಂಸತ್ತಿನ ಕಾರ್ಯವೈಖರಿಗೆ ಬಸವಣ್ಣನವರ ಅನುಭವ ಮಂಟಪವೇ ಮೂಲ ಪ್ರೇರಣೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ನಂದಿನಿ ಎಸ್.ಎ. ಸರ್ಕಾರದ ವಿವಿಧ ಅಂಗಗಳು ಹಾಗೂ ಸಂಸತ್ತಿನ ಪ್ರಾಮುಖ್ಯತೆಯನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಎಸ್. ಕುಮಾರ್ ಮಾತನಾಡಿ, ಸಂಸತ್ತಿನಲ್ಲಿ ಚರ್ಚೆಗಳು ಗಂಭೀರವಾಗಿ ನಡೆದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್ ಮಾತನಾಡಿ, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಸದನದ ಕಾರ್ಯಕಲಾಪಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಗೌರವ ದೊರೆಯುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಉತ್ತಮ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಚಂದ್ರಕುಮಾರ್ ಉಪಸ್ಥಿತರಿದ್ದರು.
ಜಿಲ್ಲಾಮಟ್ಟಕ್ಕೆ 20 ವಿದ್ಯಾರ್ಥಿಗಳ ಆಯ್ಕೆ
ವಿದ್ಯಾರ್ಥಿಗಳಿಗೆ ಅಣಕು ವಿಧಾನಸಭೆಯ ಕಾರ್ಯವೈಖರಿ ಕುರಿತು ಮಾರ್ಗದರ್ಶನ ನೀಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾಗರಾಜು ಎಂ.ಎಸ್. ಸ್ವಾಗತಿಸಿದರು. ಡಾ. ರಂಗಸ್ವಾಮಯ್ಯ ಎಚ್. ವಂದಿಸಿದರು. ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಲತಾ ಸಿ.ವಿ. ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ನಾಗರಿಕರು ಹಾಗೂ ವಿದ್ಯಾರ್ಥಿಗಳು ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಅಣಕು ಅಧಿವೇಶನ ವೀಕ್ಷಿಸಿದರು. ವಿದ್ಯಾರ್ಥಿಗಳು ವಿವಿಧ ಜನಪ್ರತಿನಿಧಿಗಳ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿ, ಸಮಸ್ಯೆಗಳ ಕುರಿತು ಅರ್ಥಪೂರ್ಣ ಚರ್ಚೆ ನಡೆಸಿದರು.
ಅತ್ಯುತ್ತಮವಾಗಿ ಪಾತ್ರ ನಿರ್ವಹಿಸಿದ 20 ವಿದ್ಯಾರ್ಥಿಗಳನ್ನು ಜಿಲ್ಲಾಮಟ್ಟದ ಯುವ ಸಂಸತ್ತು ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಭಾರತದ ಸಂವಿಧಾನದ ಪ್ರತಿಯನ್ನು ವಿತರಿಸಲಾಯಿತು.




