ಕಾಲೇಜಿನ ಗ್ರಂಥಾಲಯದಲ್ಲಿರುವ ಸುಮಾರು 50 ಸಾವಿರ ಪುಸ್ತಕಗಳ ಜ್ಞಾನ ಸಂಪನ್ಮೂಲ ಹಾಗೂ ಬೋಧಕ ವರ್ಗದ ಅನುಭವ ಮತ್ತು ಜ್ಞಾನವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಪದವಿ ಶಿಕ್ಷಣದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧತೆ ನಡೆಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಶಿಕುಮಾರ್ ಎಚ್.ಸಿ. ಸಲಹೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ **‘ಫ್ರೆಶರ್ಸ್ ಫಿಯೆಸ್ತಾ-2026’**ಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಬಿಬಿಎ ಕೋರ್ಸ್ ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕಾಲೇಜಿನಲ್ಲಿರುವ ಶೈಕ್ಷಣಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜ್ಞಾನಾರ್ಜನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅತಿಥಿಯಾಗಿ ಮಾತನಾಡಿದ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ. ರೇಣುಕಾ, ವಿದ್ಯಾರ್ಥಿಗಳು ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಇಂಗ್ಲಿಷ್ ಭಾಷಾ ಕಲಿಕೆಗೂ ಸಮಾನ ಆದ್ಯತೆ ನೀಡಬೇಕು. ಹಿರಿಯ ವಿದ್ಯಾರ್ಥಿಗಳು ಕಿರಿಯರನ್ನು ಆತ್ಮೀಯವಾಗಿ ಬರಮಾಡಿಕೊಂಡಿರುವುದು ಶ್ಲಾಘನೀಯ. ಸಮಯವನ್ನು ಸದ್ಬಳಕೆ ಮಾಡಿಕೊಂಡು ತರಗತಿಗಳಲ್ಲಿ ಗಮನವಿಟ್ಟು ಕಲಿಯಬೇಕು. ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದರು.
ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥ ಡಾ. ನಾರಾಯಣ ದಾಸ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ನಿಯಮಗಳನ್ನು ಪಾಲಿಸುವುದರೊಂದಿಗೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿ ಜೀವನವನ್ನು ಆನಂದಿಸುತ್ತಲೇ ತಮ್ಮ ಆಲೋಚನಾ ಶಕ್ತಿ, ಕುತೂಹಲ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಬೆಳೆಸಿಕೊಂಡು ಸರ್ವತೋಮುಖ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಅಧ್ಯಾಪಕ ಲೋಹಿತ್ ರಾಮ್ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




