ಬಲಿಜ ಸಮುದಾಯಕ್ಕೆ ಶೈಕ್ಷಣಿಕ ಕ್ಷೇತ್ರದಲ್ಲಿ ದೊರೆಯುತ್ತಿರುವ 2ಎ ಮೀಸಲಾತಿಯನ್ನು ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರಗಳಿಗೂ ವಿಸ್ತರಿಸಬೇಕು. ಈ ಸಂಬಂಧ ಸರ್ಕಾರದ ಮೇಲೆ ಒತ್ತಡ ತರಲು ಎಲ್ಲ ರೀತಿಯ ಪ್ರಯತ್ನ ನಡೆಸುವುದಾಗಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಹೇಳಿದರು.
ನಗರದ ಶ್ರೀ ಸಿದ್ದಿವಿನಾಯಕ ಸಮುದಾಯ ಭವನದಲ್ಲಿ ಜಿಲ್ಲಾ ಬಲಿಜ ಸಂಘ (ರಿ), ತುಮಕೂರು ಹಾಗೂ ಶ್ರೀ ಯೋಗಿ ನಾರೇಯಣ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಶ್ರೀ ಶ್ರೀ ಯೋಗಿ ನಾರೇಯಣ ಯತೀಂದ್ರರ 191ನೇ ವರ್ಷದ ಜೀವ ಸಮಾಧಿ ಮಹೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಕ್ಷೇತ್ರದಲ್ಲಿ 2ಎ ಮೀಸಲಾತಿ ದೊರೆತ ನಂತರ ಸಮುದಾಯದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗಿದೆ. ಇದೇ ಮೀಸಲಾತಿ ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ಜಾರಿಯಾದರೆ ಸರ್ಕಾರಿ ಉದ್ಯೋಗಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಸಂಸತ್ತಿನವರೆಗೆ ಸಮುದಾಯದ ಪ್ರತಿನಿಧಿತ್ವ ಹೆಚ್ಚಲು ಸಹಕಾರಿಯಾಗಲಿದೆ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಎಂ.ಆರ್. ಸೀತಾರಾಂ ಅವರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಅವರೊಂದಿಗೆ ಸೇರಿ ಬಲಿಜ ಸಮುದಾಯದ 2ಎ ಮೀಸಲಾತಿ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಲಾಗುವುದು ಎಂದರು.
ಜಿಲ್ಲಾ ಗೆಳೆಯರ ಬಳಗದ ಅಧ್ಯಕ್ಷ ಎನ್. ಗೋವಿಂದರಾಜು ಮಾತನಾಡಿ, ಹಿರಿಯರ ಹೋರಾಟದ ಫಲವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ 2ಎ ಮೀಸಲಾತಿ ದೊರೆತಿದೆ. ಅದನ್ನು ಸಮುದಾಯದ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಸದ್ಬಳಕೆ ಮಾಡಿಕೊಳ್ಳಬೇಕು. ಗ್ರಾಮೀಣ ಭಾಗದ ಬಡ ಕುಟುಂಬಗಳ ಮಕ್ಕಳಿಗೆ ಕೈಗೆಟುಕುವ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಪ್ರತಿಯೊಂದು ತಾಲ್ಲೂಕಿನಲ್ಲೂ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವಂತೆ ಉದ್ಯಮಿ ಎಸ್.ಪಿ. ಚಿದಾನಂದ ಅವರಿಗೆ ಮನವಿ ಮಾಡಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಸ್ಪೂರ್ತಿ ಡೆವಲಪರ್ಸ್‌ನ ಮಾಲೀಕ ಎಸ್.ಪಿ. ಚಿದಾನಂದ, 1975ರಲ್ಲಿ ಸ್ಥಾಪಿತವಾದ ಜಿಲ್ಲಾ ಬಲಿಜ ಸಂಘವು ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಾಸ್ಟೆಲ್‌ಗಳು, ಸಹಕಾರ ಸಂಘ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುವ ಪ್ರತಿಭಾ ಪುರಸ್ಕಾರ ಯೋಜನೆಗೆ ಭವಿಷ್ಯದಲ್ಲಿ ಒಂದು ಕೋಟಿ ರೂ. ದತ್ತಿ ನಿಧಿ ಸ್ಥಾಪಿಸುವ ಗುರಿ ಹೊಂದಿದ್ದು, ತಮ್ಮಿಂದ ಆರಂಭಿಕವಾಗಿ 10 ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದರು.
ಜಯದೇವ ಹೃದ್ರೋಗ ಆಸ್ಪತ್ರೆಯ ಹಿರಿಯ ಶಸ್ತ್ರಚಿಕಿತ್ಸಕ ಡಾ. ನಟರಾಜ ಶೆಟ್ಟಿ ಮಾತನಾಡಿ, ಕಠಿಣ ಪರಿಶ್ರಮ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನ ಹರಿಸಿದರೆ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬಹುದು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಟಿ.ಆರ್. ಆಂಜನಪ್ಪ ಮಾತನಾಡಿ, ಶಿಕ್ಷಣವೇ ಸಮುದಾಯದ ಅಭಿವೃದ್ಧಿಗೆ ಪ್ರಮುಖ ಅಸ್ತ್ರವಾಗಿದ್ದು, ಪೋಷಕರು ಯಾವುದೇ ಕಷ್ಟ ಬಂದರೂ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕರು, ವಿವಿಧ ಕ್ಷೇತ್ರಗಳ ಸಾಧಕರು, 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪೂರ್ಣಿಮಾ ಹಾಗೂ ಸದರನ್ ರೈಲ್ವೆ ಅಭಿವೃದ್ಧಿ ಮಂಡಳಿ ಸದಸ್ಯ ಲಕ್ಷ್ಮೀನಾರಾಯಣ್ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಬಲಿಜ ಸಂಘದ ಕಾರ್ಯದರ್ಶಿ ಟಿ.ಆರ್.ಎಚ್. ಪ್ರಕಾಶ್, ಹಿರಿಯ ಲೇಖಕ ಎಂ.ಡಿ. ಶ್ರೀನಿವಾಸ್, ವಿವಿಧ ತಾಲೂಕುಗಳ ಪದಾಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.




