ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅರ್ಹತೆ ಹೊಂದಿರದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಜಂಟಿ ಸ್ಥಳ ಪರಿಶೀಲನೆ ನಡೆಸಿ, ಜಿಪಿಎಸ್ ಸಹಿತ ವಿಡಿಯೋ ಹಾಗೂ ಛಾಯಾಚಿತ್ರಗಳನ್ನು ಸಲ್ಲಿಸುವಂತೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿರುವ ನಿವೇಶನ ರಹಿತ ಕುಟುಂಬಗಳನ್ನು ಸಮಗ್ರವಾಗಿ ಗುರುತಿಸಿ, ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಅಗತ್ಯವಿರುವ ಹೊಸ ಭೂಮಿಯ ಮಂಜೂರಾತಿಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ತ್ವರಿತವಾಗಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ನಿರ್ದೇಶಿಸಿದರು.
ಜಿಲ್ಲೆಯಾದ್ಯಂತ ಸುಮಾರು 50,000 ನಿವೇಶನಗಳನ್ನು ವಿತರಿಸುವ ಗುರಿ ಹೊಂದಲಾಗಿದ್ದು, ನಿವೇಶನ ಹಂಚಿಕೆ ಕಾರ್ಯಕ್ರಮವು ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದೆ. ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಗತ್ಯ ಪ್ರಸ್ತಾವನೆಗಳನ್ನು ಸೆಪ್ಟೆಂಬರ್ 25ರೊಳಗಾಗಿ ಇ-ಆಫೀಸ್ ಮೂಲಕ ಸಲ್ಲಿಸುವಂತೆ ತಿಳಿಸಿದರು.
ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸಲು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಿವೇಶನ ಹಂಚಿಕೆಗೆ ಅಗತ್ಯವಿರುವ ಸೂಕ್ತ ಸರ್ಕಾರಿ ಜಮೀನು ಲಭ್ಯವಿಲ್ಲದ ಸಂದರ್ಭದಲ್ಲಿ ಪರ್ಯಾಯ ಸರ್ಕಾರಿ ಜಮೀನನ್ನು ಗುರುತಿಸಿ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಡಿಡಿಎಲ್‌ಆರ್ ಭಾವನ, ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಎಡಿಎಲ್‌ಆರ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




