ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’ ಬಸ್‌ಗಳ ಸಂಚಾರಕ್ಕೆ ಸಾರಿಗೆ ಸಚಿವ ಬೈರತಿ ಸುರೇಶ್ ಬುಧವಾರ ಹಸಿರು ನಿಶಾನೆ ತೋರಿದರು.
ಕುಣಿಗಲ್‌ನಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೂತನ ಸಾರಿಗೆ ಸಂಪರ್ಕದಿಂದ ಕುಣಿಗಲ್ ರಾಜಧಾನಿ ಬೆಂಗಳೂರಿಗೆ ಇನ್ನಷ್ಟು ಹತ್ತಿರವಾಗಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ 4,550 ಎಲೆಕ್ಟ್ರಿಕ್ ಬಸ್‌ಗಳನ್ನು ಬಿಎಂಟಿಸಿಗೆ ಪಡೆಯಲಾಗುತ್ತಿದ್ದು, ಮುಂದಿನ 4–5 ತಿಂಗಳಲ್ಲಿ ಈ ಬಸ್‌ಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯಿಂದಾಗಿ ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಲಾಗುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಸುಮಾರು ₹21 ಸಾವಿರ ಕೋಟಿ ವೆಚ್ಚ ಮಾಡಲಿದೆ ಎಂದು ಹೇಳಿದರು.
ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಶಕ್ತಿ ಯೋಜನೆಯಡಿ 2,64,73 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ವಾರ್ಷಿಕ ₹10 ಸಾವಿರ ಕೋಟಿ ಭರಿಸುತ್ತಿದೆ ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವ ನಿರ್ಧಾರ ಕೈಗೊಂಡಿದ್ದರು. ಅದರಂತೆ ಸುಮಾರು 50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಿಸಲಾಗುತ್ತಿದ್ದು, ಇದಕ್ಕಾಗಿ ಸರ್ಕಾರ ವಾರ್ಷಿಕ ₹350–400 ಕೋಟಿ ವೆಚ್ಚ ಮಾಡಲಿದೆ ಎಂದರು.
ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜನಪರ ಕಾಳಜಿಯಿಂದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಕೋಟ್ಯಂತರ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರು ನಗರ ಇನ್ನಷ್ಟು ವಿಸ್ತಾರವಾಗಬೇಕು ಎಂಬುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ನಮ್ಮೆಲ್ಲರ ಆಶಯವಾಗಿದೆ. ಐಟಿ–ಬಿಟಿ ಸೇರಿದಂತೆ ವಿವಿಧ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗಬೇಕು. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದು ಸಚಿವರು ತಿಳಿಸಿದರು.
ರಾಜ್ಯ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಮೂಲಕ ಕರ್ನಾಟಕವನ್ನು ದೇಶದ ನಂಬರ್ ಒನ್ ರಾಜ್ಯವನ್ನಾಗಿ ಮಾಡಲು ನಾವೆಲ್ಲರೂ ಪಣ ತೊಟ್ಟಿದ್ದೇವೆ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಶಾಸಕ ಡಾ. ರಂಗನಾಥ್ ಸೇರಿದಂತೆ ಅಧಿಕಾರಿಗಳು ಹಾಗೂ ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.




