ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರ್ ಕಚೇರಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದರು.
ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಯಾವುದೇ ಹಕ್ಕು ಅಥವಾ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕರಡು ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ನಮೂನೆ-6ರ ಮೂಲಕ ಮತದಾರರ ನೋಂದಣಾಧಿಕಾರಿಗಳು, ಬಿಎಲ್‌ಒ ಅಥವಾ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. 2026ರ ಅಕ್ಟೋಬರ್ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರೂ ನೋಂದಣಿಗೆ ಅರ್ಹರಾಗಿರುತ್ತಾರೆ ಎಂದರು.
ವಿಶೇಷ ಸಮಗ್ರ ಪರಿಷ್ಕರಣೆಯ ಬಳಿಕ ಪ್ರಕಟಿಸಿರುವ ಕರಡು ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 20,61,786 ಮತದಾರರು ಇದ್ದಾರೆ. ಈ ಪೈಕಿ 10,22,023 ಪುರುಷರು, 10,39,709 ಮಹಿಳೆಯರು ಹಾಗೂ 54 ಇತರ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.
ಮತಗಟ್ಟೆಗಳ ಪುನರ್‌ರಚನೆ ಪ್ರಕ್ರಿಯೆಯ ಬಳಿಕ ಜಿಲ್ಲೆಯಲ್ಲಿ 118 ಹೊಸ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಇದರಿಂದ ಈ ಹಿಂದೆ 2,627 ಇದ್ದ ಮತಗಟ್ಟೆಗಳ ಸಂಖ್ಯೆ ಇದೀಗ 2,745ಕ್ಕೆ ಏರಿಕೆಯಾಗಿದೆ.
1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿದ್ದ ಮತಗಟ್ಟೆಗಳನ್ನು ವಿಭಜಿಸಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅಗತ್ಯವಿರುವ ಕಡೆ ಕಟ್ಟಡಗಳ ಸ್ಥಳ ಹಾಗೂ ಹೆಸರುಗಳಲ್ಲಿಯೂ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ತಿದ್ದುಪಡಿ ದೋಷ ಹೊಂದಿರುವ 69,236 ಮತದಾರರು ಹಾಗೂ ಮ್ಯಾಪಿಂಗ್ ಆಗದ 42,642 ಮತದಾರರು ಸೇರಿದಂತೆ ಒಟ್ಟು 1,11,878 ಮಂದಿಗೆ ನೋಟಿಸ್ ನೀಡಲಾಗುತ್ತಿದೆ. ಸಂಬಂಧಪಟ್ಟವರು ನಿಗದಿತ ದಿನಾಂಕದಂದು ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
SIR ಪ್ರಕ್ರಿಯೆಯಡಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆಯಲ್ಲಿ ಒಟ್ಟು 2,37,093 ASDDO ಮತದಾರರನ್ನು ಗುರುತಿಸಲಾಗಿದೆ. ಇವರಲ್ಲಿ 33,021 ಮಂದಿ ಗೈರುಹಾಜರಿ, 1,34,264 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 49,084 ಮಂದಿ ಮೃತಪಟ್ಟವರು, 18,829 ಮಂದಿ ಡುಪ್ಲಿಕೇಟ್ ಮತದಾರರು ಹಾಗೂ 1,895 ಮಂದಿ ಇತರೆ ಪ್ರಕರಣಗಳಿಗೆ ಸೇರಿದವರಾಗಿದ್ದಾರೆ ಎಂದು ಶುಭ ಕಲ್ಯಾಣ್ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.




