ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ₹5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಪ್ರತಿ ತಾಲ್ಲೂಕಿನಲ್ಲಿ ವಾರಕ್ಕೊಮ್ಮೆ ಟಾಸ್ಕ್ಫೋರ್ಸ್ ಸಭೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬರ ಪರಿಸ್ಥಿತಿ ವಿಶೇಷ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೆಂದೂ ಕಂಡಿರದ ರೀತಿಯ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪರಿಹಾರ ನೀಡುವಂತೆ ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು ಹಾಗೂ ಕೃಷಿ ಸಚಿವರಿಗೆ ಮುಖ್ಯಮಂತ್ರಿ ಹಾಗೂ ತಾವು ಪತ್ರ ಬರೆದಿರುವುದಾಗಿ ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಇದುವರೆಗೆ ಕೇವಲ 9.34 ಶೇಕಡಾ ಬಿತ್ತನೆ ಮಾತ್ರ ನಡೆದಿದ್ದು, ಪಾವಗಡ ಹೊರತುಪಡಿಸಿ ಉಳಿದ ಬಹುತೇಕ ತಾಲ್ಲೂಕುಗಳು ಬರಪೀಡಿತವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು. ಜಾನುವಾರುಗಳಿಗೆ ಮೇವು ಕೊರತೆ, ರೈತರಿಗೆ ಉದ್ಯೋಗದ ಅಭಾವದಿಂದ ಜನರು ಹಾಗೂ ಜಾನುವಾರುಗಳು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದರು.

ಜಾನುವಾರುಗಳಿಗೆ ಮೇವು ಒದಗಿಸಲು ರೈತರಿಗೆ ಮೇವಿನ ಕಿಟ್ಗಳನ್ನು ವಿತರಿಸಲಾಗುವುದು. ನೀರಿನ ಲಭ್ಯತೆ ಇರುವ ರೈತರಿಗೆ ಮೇವು ಬೆಳೆಯಲು ಮೇವಿನ ಬೀಜಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ಪ್ರತಿ ಜಿಲ್ಲೆಗೆ ₹5 ಕೋಟಿ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಒಟ್ಟು ₹3.50 ಕೋಟಿ ಅನುದಾನ ಒದಗಿಸಲಾಗಿದೆ. ಅಗತ್ಯವಿರುವ ಕಡೆ ತಕ್ಷಣ ಕೊಳವೆ ಬಾವಿ ಕೊರೆದು ವಿದ್ಯುತ್ ಸಂಪರ್ಕ ಕಲ್ಪಿಸಿ ಸಾರ್ವಜನಿಕರಿಗೆ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಪ್ರತಿ ತಾಲ್ಲೂಕಿನಲ್ಲಿ ವಾರಕ್ಕೊಮ್ಮೆ ಟಾಸ್ಕ್ಫೋರ್ಸ್ ಸಭೆ ನಡೆಸಿ ಕೈಗೊಂಡ ನಿರ್ಣಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು. ಶಿಫಾರಸುಗಳ ಆಧಾರದಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು
ಜಿಲ್ಲೆಯ 341 ಮಳೆ ಮಾಪನ ಕೇಂದ್ರಗಳ ಪೈಕಿ 110 ಕೇಂದ್ರಗಳು ಕಾರ್ಯನಿರ್ವಹಿಸದ ಸ್ಥಿತಿಯಲ್ಲಿದ್ದು, ಅವುಗಳನ್ನು ತಕ್ಷಣ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಡಿಸಿಎಂ ನಿರ್ದೇಶನ ನೀಡಿದರು.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸಾವಿನ ವರದಿಗಳು ಬಂದಿರುವ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ನಿಗಾ ವಹಿಸಿ ಅಗತ್ಯವಿದ್ದರೆ ಚೆಕ್ಪೋಸ್ಟ್ಗಳನ್ನು ತೆರೆಯಲು ಸೂಚಿಸಲಾಗಿದೆ. ಸೋಂಕು ಕಂಡುಬಂದರೆ ತಕ್ಷಣ ಕ್ವಾರಂಟೈನ್ ವ್ಯವಸ್ಥೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.

ಇನ್ನೊಂದೆಡೆ, ಪಾವಗಡ ಹಾಗೂ ಮಧುಗಿರಿ ತಾಲ್ಲೂಕುಗಳಲ್ಲಿ ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೂರು ಪ್ರಯೋಗಾಲಯಗಳನ್ನು ಸಜ್ಜುಗೊಳಿಸಿ ಫೀವರ್ ಕ್ಲಿನಿಕ್ಗಳನ್ನು ಆರಂಭಿಸಲು ನಿರ್ದೇಶನ ನೀಡಿದರು. ಕುಡಿಯುವ ನೀರಿನ ಟ್ಯಾಂಕ್ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ ಸಾರ್ವಜನಿಕ ಆರೋಗ್ಯ ಕಾಪಾಡುವಂತೆ ಸೂಚಿಸಿದರು.
ಜಿಲ್ಲೆಯಲ್ಲಿರುವ 1,857 ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು. ಖಾಸಗಿ ಸಂಸ್ಥೆಗಳ ನಿರ್ವಹಣೆಯಲ್ಲಿರುವ ಘಟಕಗಳ ಮೇಲೂ ಅಧಿಕಾರಿಗಳು ನಿಗಾ ವಹಿಸುವಂತೆ ತಾಕೀತು ಮಾಡಿದರು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಶಾಸಕರಾದ ಸುರೇಶ್ ಬಾಬು, ರಮೇಶ್ ಬಾಬು, ಡಿ.ಟಿ. ಶ್ರೀನಿವಾಸ್, ಡಾ: ರಂಗನಾಥ್, ಬಿಎಂಟಿಸಿ ಉಪಾಧ್ಯಕ್ಷ ನಿಖೇತ್ ರಾಜ್ ಎಂ, ಗ್ಯಾರಂಟಿ ಸಮಿತಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.




