ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ನ 75ನೇ ವರ್ಷಾಚರಣೆ ಅಂಗವಾಗಿ ಜುಲೈ 27ರಿಂದ ಆಗಸ್ಟ್ 1ರವರೆಗೆ ತುಮಕೂರು ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಯೋನೆಕ್ಸ್-ಸನ್ರೈಸ್ ರಾಜ್ಯ ರ್ಯಾಂಕಿಂಗ್ ಅಂಡರ್-11 ಹಾಗೂ ಅಂಡರ್-13 ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ, ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 500 ರಿಂದ 600 ಪ್ರತಿಭಾವಂತ ಕಿರಿಯ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಒಲಿಂಪಿಕ್ ಮಟ್ಟದ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವ ಉದ್ದೇಶದಿಂದ ಈ ಟೂರ್ನಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಆರು ದಿನಗಳ ಕಾಲ ಆರು ಅಂಕಣಗಳಲ್ಲಿ ಪಂದ್ಯಾವಳಿ ನಡೆಯಲಿದ್ದು, ಆಗಸ್ಟ್ 1ರಂದು ಸಮಾರೋಪ ಸಮಾರಂಭ ನಡೆಯಲಿದೆ. ಜುಲೈ 27ರಂದು ಬೆಳಿಗ್ಗೆ 10.45ಕ್ಕೆ ತುಮಕೂರು ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವ ವಿ. ಸೋಮಣ್ಣ, ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಗಣ್ಯ ಕ್ರೀಡಾಪಟುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬ್ಯಾಡ್ಮಿಂಟನ್ ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು, ಹೊಸ ಪ್ರತಿಭೆಗಳನ್ನು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಸಲು ಇಂತಹ ಪಂದ್ಯಾವಳಿಗಳು ನೆರವಾಗಲಿವೆ. ಎಲ್ಲಾ ಜಿಲ್ಲೆಗಳಲ್ಲೂ ಸುಸಜ್ಜಿತ ಬ್ಯಾಡ್ಮಿಂಟನ್ ಕ್ರೀಡಾಂಗಣಗಳ ನಿರ್ಮಾಣಕ್ಕೆ ಸರ್ಕಾರ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ ಎಂದು ಕುಮಾರ್ ಬಂಗಾರಪ್ಪ ಹೇಳಿದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ರಾಜ್ಯಮಟ್ಟದ ಪ್ರತಿಷ್ಠಿತ ಬ್ಯಾಡ್ಮಿಂಟನ್ ಪಂದ್ಯಾವಳಿ ತುಮಕೂರಿನಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಜಿಲ್ಲೆಯ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ತುಮಕೂರು ಬ್ಯಾಡ್ಮಿಂಟನ್ ಅಕಾಡೆಮಿ ಅಧ್ಯಕ್ಷ ಪಿ. ಪ್ರವೀಣ್, ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ವಿ. ಮುರಳಿಧರ್, ಸದಸ್ಯರಾದ ಸುಧೀರ್, ಹರೀಶ್ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.




