ಯುವಜನರಲ್ಲಿ ಶಿಸ್ತು, ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭಾರತ್ ಜೋಡೋ ಯುವ ಮಿಷನ್ ಯೋಜನೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಜಿ. ಪರಮೇಶ್ವರ ಕರೆ ನೀಡಿದರು.
ನಗರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಭಾರತ್ ಜೋಡೋ ಯುವ ಮಿಷನ್ ಯೋಜನೆಯಡಿ ನೋಂದಾಯಿಸಿಕೊಂಡಿರುವ ಶಿರಾ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಚಿದಾನಂದ ಹಾಗೂ ಗುಬ್ಬಿ ತಾಲ್ಲೂಕಿನ ಇರಕಸಂದ್ರ ಗ್ರಾಮದ ಸಂತೋಷ್ ಅವರಿಗೆ ನೋಂದಣಿ ದೃಢೀಕರಣ ಪತ್ರವನ್ನು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸಾಂಕೇತಿಕವಾಗಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಕರಲ್ಲಿ ನಾಯಕತ್ವ ಗುಣ, ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಕಳಕಳಿಯನ್ನು ಬೆಳೆಸುವ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಮಿಷನ್‌ನ ಪ್ರಮುಖ ಉದ್ದೇಶವಾಗಿದೆ. ಯುವಜನರು ಯೋಜನೆಯ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವ ಹಾಗೂ ನಾಯಕತ್ವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಭಾರತ್ ಜೋಡೋ ಯುವ ಮಿಷನ್ ಮೂಲಕ ಯುವಕರನ್ನು ಸಮಾಜಮುಖಿ ಚಟುವಟಿಕೆಗಳಿಗೆ ತೊಡಗಿಸಿ, ಅವರಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಆದ್ದರಿಂದ ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಕೆ.ಪಿ. ಸಂಜೀವಪ್ಪ ಹಾಗೂ ಈಶ್ವರಪ್ಪ, ತುಮಕೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




