ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ ನಡೆದಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಕುರಿತು ತನಿಖೆ ನಡೆಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯ ನಂತರ ನಡೆದಿರುವ ಚುನಾವಣೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಕುರಿತು ಪ್ರಸ್ತಾಪಿಸಿದಾಗ ಚುನಾವಣಾ ಆಯೋಗದ ಮುಖ್ಯಸ್ಥರು ನೀಡಿದ ಪ್ರತಿಕ್ರಿಯೆ ಆಕ್ಷೇಪಾರ್ಹವಾಗಿದೆ ಎಂದು ಟೀಕಿಸಿದ ಅವರು, ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಡಾ. ಎಸ್. ಷಫಿ ಅಹಮದ್ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಆಯೋಗದ ನಿರ್ಧಾರಗಳ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ. ಆಯೋಗದ ಇತರ ಸದಸ್ಯರು ಕೆಲವು ನಿರ್ಧಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ವರದಿಗಳು ಸಂಸ್ಥೆಯ ಕಾರ್ಯವೈಖರಿಯ ಕುರಿತು ಚರ್ಚೆಗೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯಿಂದ ಬಡವರು, ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗಬಾರದು. ಪ್ರತಿಯೊಬ್ಬ ಅರ್ಹ ಪ್ರಜೆಯ ಮತದಾನದ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಮಾತನಾಡಿ, ಚುನಾವಣೆಯ ಘನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವಲ್ಲಿ ಚುನಾವಣಾ ಆಯೋಗದ ಹೊಣೆಗಾರಿಕೆ ಮಹತ್ವದ್ದಾಗಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು.
ಮಾಜಿ ಶಾಸಕ ಡಾ. ರಫೀಕ್ ಅಹಮದ್ ಮಾತನಾಡಿ, ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂಬ ಆತಂಕವಿದೆ. ವಿಶೇಷವಾಗಿ ದಲಿತರು ಹಾಗೂ ಅನಕ್ಷರಸ್ಥ ಮತದಾರರ ಹೆಸರುಗಳನ್ನು ಫಾರ್ಮ್–7 ಮೂಲಕ ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪಗಳಿವೆ. ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ಚುನಾವಣಾ ಆಯೋಗದ ನಿರ್ಧಾರಗಳು ಹಾಗೂ ಅದರ ಕಾರ್ಯವೈಖರಿಯ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಯುವಜನರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತವಾಗಿ ಹೋರಾಟ ನಡೆಸಬೇಕಿದೆ ಎಂದರು.
ಪ್ರತಿಭಟನೆಯಲ್ಲಿ ಕೆಂಚಮಾರಯ್ಯ, ಆರ್. ರಾಮಕೃಷ್ಣ, ನರಸೀಯಪ್ಪ, ಹೆಚ್.ಸಿ. ಹನುಮಂತಯ್ಯ, ಕುಮಾರಸ್ವಾಮಿ, ಸಂಜೀವಕುಮಾರ್, ಶ್ರೀನಿವಾಸಕುಮಾರ್, ಲಕ್ಷ್ಮಣ, ರಂಗಸ್ವಾಮಯ್ಯ ಸಿದ್ದಾಪುರ, ಇರ್ಫಾನ್ ಅಹಮದ್, ಜಾಕಿರ್ ಪಾಷ, ಸುಜಾತ, ಮೆಹಬೂಬ್ ಪಾಷ, ನಿಂಗರಾಜು, ಆಟೋ ರಾಜು, ಪಂಚಾಕ್ಷರಯ್ಯ, ಆದಿಲ್, ಸೈಯದ್ ದಾದಾಫೀರ್, ನಟರಾಜಶೆಟ್ಟಿ, ಕೆಂಪರಾಜು, ಸುರೇಶರಾಜ್, ಭಾಗ್ಯ ಶೇಖರ್, ಸುಮತಿ, ನಾಗಲಕ್ಷ್ಮಿ, ವಿಜಯಲಕ್ಷ್ಮಿ, ಭಾಗ್ಯಮ್ಮ, ಸಿದ್ದಲಿಂಗೇಗೌಡ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.




