ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಬಿ.ಸಿ. ನಾಗೇಶ್ (67) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
1959ರ ಜುಲೈ 1ರಂದು ಜನಿಸಿದ್ದ ನಾಗೇಶ್ ಅವರು ಬೆಂಗಳೂರಿನಲ್ಲಿರುವ ತಮ್ಮ ಸಹೋದರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಪತ್ನಿ ವೀಣಾ, ಪುತ್ರ ವಿಶ್ವದೀಪ್ ಹಾಗೂ ಪುತ್ರಿ ಶಾರದಾ ಅವರನ್ನು ಅಗಲಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು, ಬಳಿಕ ಸ್ವಕ್ಷೇತ್ರ ತಿಪಟೂರಿಗೆ ಕೊಂಡೊಯ್ಯಲಾಗುವುದು. ತಿಪಟೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾಗೇಶ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ತಿಪಟೂರು ಸೇರಿದಂತೆ ಬಿಜೆಪಿ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಕ್ಷೇತ್ರದ ಜನತೆ ಸಂತಾಪ ವ್ಯಕ್ತಪಡಿಸಿದ್ದಾರೆ.




