ವಿವಿಧತೆಯಲ್ಲಿ ಏಕತೆ ಸಾರುವ ಮನೋಭಾವ ಯುವಜನರಲ್ಲಿ ಮೂಡಬೇಕು. ಜಾತಿ, ಧರ್ಮ ಹಾಗೂ ಭಾಷೆಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಶಕ್ತಿಗಳನ್ನು ಮೆಟ್ಟಿ ನಿಂತು ಭಾರತೀಯತೆ ಮತ್ತು ರಾಷ್ಟ್ರೀಯ ಏಕತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಯುವಕರು ಹೊತ್ತುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ಕರೆ ನೀಡಿದರು.
ತುಮಕೂರು ನಗರದ ಗಾಜಿನ ಮನೆಯಲ್ಲಿ ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನವೆಂಬರ್ 29 ಮತ್ತು 30ರಂದು ಆಯೋಜಿಸಿರುವ ರಾಜ್ಯಮಟ್ಟದ ಯುವಜನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರೇ ದೇಶದ ಶಕ್ತಿ. ದೇಶವನ್ನು ಕಟ್ಟುವ ಮತ್ತು ಮುನ್ನಡೆಸುವ ಸಾಮರ್ಥ್ಯ ಯುವಜನತೆಯಲ್ಲಿದೆ. ಅವರಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸುವ ಮೂಲಕ ನಾಯಕತ್ವದ ಗುಣ, ಕೌಶಲ್ಯ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಬೇಕಿದೆ. ಯುವಜನೋತ್ಸವದಂತಹ ಕಾರ್ಯಕ್ರಮಗಳು ಯುವಕರಲ್ಲಿ ನಾಡಿನ ಇತಿಹಾಸ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವುದರೊಂದಿಗೆ ರಾಷ್ಟ್ರೀಯ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಭಾರತ ವಿವಿಧ ಭಾಷೆ, ಸಂಸ್ಕೃತಿ, ಜಾತಿ ಮತ್ತು ಧರ್ಮಗಳ ಸಂಗಮವಾಗಿದೆ. ಆದರೆ ನಾವೆಲ್ಲರೂ ಭಾರತೀಯರು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಇರಬೇಕು. ಸಂವಿಧಾನವು ಪ್ರತಿಯೊಬ್ಬರಿಗೂ ತಮ್ಮ ಧರ್ಮ ಮತ್ತು ನಂಬಿಕೆಗಳನ್ನು ಆಚರಿಸುವ ಸ್ವಾತಂತ್ರ್ಯ ಕಲ್ಪಿಸಿದೆ. ಸಂವಿಧಾನದ ಆಶಯದಂತೆ ಸಮಾನತೆ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಸ್ವಾಮಿ ವಿವೇಕಾನಂದರು ಯುವಶಕ್ತಿಯ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಅವರ ಆಶಯದಂತೆ ಯುವಕರಿಗೆ ಅವಕಾಶ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಡಿಜಿಟಲ್ ಸಾಕ್ಷರತೆ ಹಾಗೂ ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದರು.
ಪ್ರತಿವರ್ಷ ದೇಶದಲ್ಲಿ ಕೋಟ್ಯಂತರ ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸುತ್ತಿದ್ದಾರೆ. ಆದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತಿಲ್ಲ. ಕೇವಲ ಪದವಿ ಪಡೆದರೆ ಸಾಲದು, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಯುವಕರನ್ನು ಉದ್ಯೋಗಾಕಾಂಕ್ಷಿಗಳನ್ನಾಗಿ ಮಾತ್ರವಲ್ಲದೆ ಉದ್ಯೋಗ ಸೃಷ್ಟಿಸುವ ಉದ್ಯಮಿಗಳನ್ನಾಗಿಯೂ ರೂಪಿಸಬೇಕಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಬೆಂಗಳೂರಿನ ಹೊರತಾಗಿಯೂ ಬೆಳಗಾವಿ, ಬೀದರ್, ಹುಬ್ಬಳ್ಳಿ-ಧಾರವಾಡ, ಹಾಸನ, ಮಂಗಳೂರು ಮತ್ತು ತುಮಕೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಹೂಡಿಕೆದಾರರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ತುಮಕೂರು ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಗೆ ಹೊಸ ಕೈಗಾರಿಕೆಗಳನ್ನು ತರಲು ಪ್ರಯತ್ನಿಸಲಾಗುತ್ತಿದೆ. ಗ್ರೀನ್ ಹೈಡ್ರೋಜನ್ ಮತ್ತು ಡೇಟಾ ಸೆಂಟರ್ ಕ್ಷೇತ್ರಗಳಲ್ಲಿ ಸುಮಾರು 35 ಸಾವಿರ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಗಳಿವೆ. ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಉಪಕರಣಗಳು, ಮದ್ದುಗುಂಡು ಹಾಗೂ ಕ್ಷಿಪಣಿ ತಯಾರಿಕಾ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.
ತುಮಕೂರಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಪ್ರಯತ್ನ ಮುಂದುವರಿದಿದ್ದು, ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದೆ. ವಿದೇಶಿ ಹೂಡಿಕೆದಾರರು ತುಮಕೂರಿನಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದು, ಈ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ ಎಂದರು.
ಬಸವಣ್ಣನವರು ಶತಮಾನಗಳ ಹಿಂದೆಯೇ ಸಮಾನತೆಯ ಸಂದೇಶ ಸಾರಿದ್ದರು. ಅದೇ ಆಶಯವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಪ್ರತಿಪಾದಿಸಿದ್ದಾರೆ. ಈ ಮಹನೀಯರ ವಿಚಾರಧಾರೆಗಳನ್ನು ಯುವಕರು ಅಳವಡಿಸಿಕೊಂಡು ಕರ್ನಾಟಕವನ್ನು ಶಾಂತಿಯ ತೋಟವನ್ನಾಗಿ ರೂಪಿಸಬೇಕು ಎಂದು ಕರೆ ನೀಡಿದರು.
ಯುವಕರನ್ನು ಒಗ್ಗೂಡಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿ ಸಂಘಕ್ಕೆ ವರ್ಷಕ್ಕೆ ₹10 ಲಕ್ಷ ಅನುದಾನ ನೀಡುವ ಉದ್ದೇಶವಿದ್ದು, ಸಾಹಿತ್ಯ, ಸಂಸ್ಕೃತಿ, ನಾಟಕ, ಬೀದಿ ನಾಟಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ 1,023 ಸ್ಪರ್ಧಿಗಳು ಯುವಜನೋತ್ಸವಕ್ಕೆ ನೋಂದಾಯಿಸಿಕೊಂಡಿದ್ದಾರೆ. ಜಾನಪದ ನೃತ್ಯ, ಜನಪದ ಗೀತೆ, ಬೀದಿ ನಾಟಕ, ಚಿತ್ರಕಲೆ, ಕವಿತೆ ರಚನೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗುವವರು 2027ರ ಜನವರಿ 12ರಂದು ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಿ. ಚಂದ್ರಶೇಖರ್, ನಿಕೇತ್ ರಾಜ್ ಮೌರ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ನೋಂದಣಿಯಾದ 11 ಭಾರತ್ ಜೋಡೋ ಯುವ ಸಂಘಗಳಿಗೆ ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ನೋಂದಣಿ ಪತ್ರ ವಿತರಿಸಿದರು.



