ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗ ಹಾಗೂ ಮಾಹಿತಿ ಹಕ್ಕು ವಿಭಾಗದ ನೇತೃತ್ವದಲ್ಲಿ ವಕೀಲರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಟಿ.ಎನ್. ಸುರೇಶ್, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಆತಂಕಕ್ಕೆ ದೂಡಿದ್ದು, ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಅವರು ರಾಜೀನಾಮೆ ನೀಡದಿದ್ದರೆ ರಾಷ್ಟ್ರಪತಿಗಳು ಸಂವಿಧಾನದ ಅನುಚ್ಛೇದ 75(2)ರಡಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ನ್ಯಾಯಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿರುವುದು ಹಾಗೂ ಪ್ರಧಾನಿ ನಿವಾಸದ ಎದುರು ಪ್ರತಿಭಟನೆಗೆ ಮುಂದಾದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದು ಅವರು ಟೀಕಿಸಿದರು. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ಕೇಂದ್ರ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು
ಹಿರಿಯ ವಕೀಲ ವಿ.ಆರ್. ವೆಂಕಟೇಶಪ್ಪ ಮಾತನಾಡಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ ಎಂದು ಹೇಳಿದರು.
ನೀಟ್ ಹಗರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಕೀಲರಾದ ಹೆಚ್. ನಾಗರಾಜು, ಹೆಚ್.ಎಲ್. ವಸಂತಕುಮಾರ್, ಕೆ.ಸಿ. ವೆಂಕಟೇಶ್, ಮಲ್ಲಿಕಾರ್ಜುನ್, ಶಿವಣ್ಣ, ಕೆ.ಎನ್. ಹರೀಶ್, ಶಿವಕುಮಾರಸ್ವಾಮಿ, ಎನ್.ಆರ್. ರವಿ, ನವೀನ್ ನಾಯಕ್, ನಾಗರಾಜ್ ಪಾವಗಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.





