ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರವನ್ನು ಖಂಡಿಸಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ತುಮಕೂರಿನ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಸ್ವಾತಂತ್ರ್ಯ ಚೌಕದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಗತಿಪರ ಚಿಂತಕ ಪ್ರೊ. ಕೆ. ದೊರೈರಾಜ್, ನೀಟ್ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದ್ದು, ಅನೇಕ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದರು. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸೋನಮ್ ವಾಂಗ್ಚುಕ್ ಅವರ ಶಾಂತಿಯುತ ಹೋರಾಟಕ್ಕೆ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ, ಅವರನ್ನು ಸೂಕ್ತ ಕಾನೂನು ಪ್ರಕ್ರಿಯೆ ಪಾಲಿಸದೆ ವಶಕ್ಕೆ ಪಡೆದಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅವರು ಟೀಕಿಸಿದರು. ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಯುವಜನರು ಸಂಘಟಿತರಾಗಿ ಹೋರಾಟ ನಡೆಸಬೇಕಿದೆ ಎಂದರು.
ಪರಿಸರವಾದಿ ಹಾಗೂ ವಿಜ್ಞಾನ ಕೇಂದ್ರದ ಸಿ. ಯತಿರಾಜ್ ಮಾತನಾಡಿ, ಶಿಕ್ಷಣ ವ್ಯವಸ್ಥೆಯನ್ನು ವ್ಯಾಪಾರೀಕರಣಗೊಳಿಸಿರುವ ನೀತಿಗಳೇ ಇಂತಹ ಅಕ್ರಮಗಳಿಗೆ ಕಾರಣವಾಗಿವೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳ ಕನಸುಗಳನ್ನು ರಕ್ಷಿಸುವ ಹೊಣೆ ಸರ್ಕಾರದ ಮೇಲಿದೆ. ಶಿಕ್ಷಣ ಎಲ್ಲರಿಗೂ ಸಮಾನವಾಗಿ ಲಭ್ಯವಾಗುವಂತ ನೀತಿಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರೊ. ಚಂದ್ರಕಾಂತ್ ಮಾತನಾಡಿ, ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಕೇಂದ್ರ ಸರ್ಕಾರ ಕೈಬಿಟ್ಟು, ನೀಟ್ ಹಗರಣದಿಂದ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘಟನೆಯ ಬಿ. ಉಮೇಶ್, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯ ಅನುಪಮಾ, ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷೆ ಕಲ್ಯಾಣಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಬ್ಬಣ್ಣ, ಸ್ಲಂ ಸಮಿತಿ ಜಿಲ್ಲಾ ಅಧ್ಯಕ್ಷ ಎ. ನರಸಿಂಹಮೂರ್ತಿ, ಎಪಿಸಿಆರ್‌ನ ತಾಜುದ್ದೀನ್ ಷರೀಫ್, ಎದ್ದೇಳು ಕರ್ನಾಟಕದ ಆದಂಖಾನ್, ತುಮಕೂರು ವಿಶ್ವವಿದ್ಯಾಲಯದ ನವೀನ್ ಪೂಜಾರಹಳ್ಳಿ, ಮುಸ್ಲಿಂ ವಿದ್ಯಾರ್ಥಿಗಳ ಸಂಘದ ಖಲೀಲ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿದರು.
ಪ್ರತಿಭಟನೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಮಹಿಳೆಯರು, ವಕೀಲರು ಹಾಗೂ ಸಾರ್ವಜನಿಕರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.





