ತುಮಕೂರು ಜಿಲ್ಲೆಯಲ್ಲಿನ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ ಎಂದು ಆರೋಪಿಸಿ, ಕೆಆರ್ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನ ಸಿಂಧುಸ್ವಾಮಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಮಕೂರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ಜನಪರ ಹೋರಾಟಗಳ ಮೂಲಕ ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಬೆಳಕಿಗೆ ತಂದಿದ್ದು, ಅಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಕ್ಕಾಗಿ ವಿವಿಧ ಸಂದರ್ಭಗಳಲ್ಲಿ ಆರು ಪ್ರಕರಣಗಳನ್ನು ದಾಖಲಿಸಿ, ಇದೀಗ ಅದನ್ನೇ ಆಧಾರವಾಗಿಸಿಕೊಂಡು ರೌಡಿಶೀಟ್ ತೆರೆಯಲಾಗಿದೆ ಎಂದು ಆರೋಪಿಸಿದರು.
ಜನರ ಪರವಾಗಿ ಹೋರಾಟ ನಡೆಸುವುದು ಅಪರಾಧವಲ್ಲ. ಅಧಿಕಾರಿಗಳ ತಪ್ಪುಗಳನ್ನು ಪ್ರಶ್ನಿಸಿದ್ದಕ್ಕಾಗಿ ಸೇಡಿನ ರಾಜಕಾರಣದ ಭಾಗವಾಗಿ ಪ್ರಕರಣಗಳನ್ನು ದಾಖಲಿಸುವುದು ಹಾಗೂ ನಂತರ ರೌಡಿಶೀಟ್ ತೆರೆಯುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಿಂದ ಪದೇಪದೇ ದೂರುಗಳು ಬರುತ್ತಿದ್ದರೂ, ಅವುಗಳನ್ನು ಸರಿಪಡಿಸುವ ಬದಲು ಪ್ರಶ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಅಧಿಕಾರ ದುರುಪಯೋಗದ ಸ್ಪಷ್ಟ ಉದಾಹರಣೆಯಾಗಿದೆ ಎಂದು ಆರೋಪಿಸಿದರು.
ಮಲ್ಲಿಕಾರ್ಜುನ ಭಟ್ಟರಹಳ್ಳಿ ವಿರುದ್ಧ ದಾಖಲಾಗಿರುವ ಪ್ರಕರಣಗಳು ಕೊಲೆ, ದರೋಡೆ ಅಥವಾ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವಂತಹ ಗಂಭೀರ ಅಪರಾಧಗಳಿಗೆ ಸಂಬಂಧಿಸಿದವುಗಳಲ್ಲ. ಜನಪರ ಹೋರಾಟಗಳು ಮತ್ತು ಪ್ರತಿಭಟನೆಗಳ ಸಂದರ್ಭದಲ್ಲಿ ದಾಖಲಾಗಿರುವ ಪ್ರಕರಣಗಳಾಗಿದ್ದು, ಇಂತಹ ಪ್ರಕರಣಗಳನ್ನು ಆಧಾರವಾಗಿಸಿಕೊಂಡು ರೌಡಿಶೀಟ್ ತೆರೆಯುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳ ವಿರುದ್ಧ ಚುನಾವಣಾ ಅಫಿಡವಿಟ್ಗಳಲ್ಲಿ ಹೆಚ್ಚಿನ ಸಂಖ್ಯೆಯ ಕ್ರಿಮಿನಲ್ ಪ್ರಕರಣಗಳು ಉಲ್ಲೇಖವಾಗಿವೆ. ಅವರ ವಿರುದ್ಧ ಇದೇ ರೀತಿಯ ಕ್ರಮವನ್ನು ಪೊಲೀಸ್ ಇಲಾಖೆ ಯಾವಾಗ ಕೈಗೊಳ್ಳುತ್ತದೆ ಎಂಬುದನ್ನು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು
ಇದೇ ರೀತಿಯ ಕ್ರಮಗಳು ಮುಂದುವರಿದರೆ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಜ್ಞಾನ ಸಿಂಧುಸ್ವಾಮಿ, ಅಧಿಕಾರಿಗಳು ಅಧಿಕಾರ ದುರುಪಯೋಗ ಮಾಡದೆ ಜನಪರವಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದರು.




