ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಡಾ. ವೈ.ಕೆ. ಬಾಲಕೃಷ್ಣಪ್ಪ, ಸೆ.20ರಂದು ಗಣೇಶ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಗ್ರಾಮದ ಇತರೆ ಸಮುದಾಯದ ಯುವಕರು ಕ್ಷುಲ್ಲಕ ಕಾರಣಕ್ಕೆ ಸಿಂಹಾದ್ರಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ದಲಿತ ಸಮುದಾಯದವರೊಬ್ಬರು ಗೃಹ ಸಚಿವರಾಗಿರುವ ಸಂದರ್ಭದಲ್ಲಿ ದಲಿತರ ಮೇಲೆಯೇ ದೌರ್ಜನ್ಯಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಅವರು ಹೇಳಿದರು. ಮಧುಗಿರಿ ತಾಲ್ಲೂಕಿನಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಸಾಪುರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಗ್ರಾಮದಲ್ಲಿ ಸೌಹಾರ್ದ ವಾತಾವರಣ ನಿರ್ಮಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯದ ವಿವಿಧ ಭಾಗಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಡೆದಿರುವ ದಲಿತರ ಹತ್ಯೆ ಸೇರಿದಂತೆ ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿರುವುದಾಗಿ ತಿಳಿಸಿದರು.
ಜಾತ್ಯತೀತತೆ, ಸಂವಿಧಾನ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಲ್ಲಿ ನಂಬಿಕೆ ಹೊಂದಿರುವ ಸರ್ಕಾರ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಸಚಿವರು, ಅಧಿಕಾರಿಗಳು ಹಾಗೂ ದಲಿತಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿ ಮಾಡಿದರು.
ಗ್ರಾಮಗಳಲ್ಲಿ ಕೋಮುಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊಂದಿರುವ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಕಸಾಪುರದಲ್ಲಿ ನಡೆದಿರುವ ಸಿಂಹಾದ್ರಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವುದರ ಜತೆಗೆ ಗ್ರಾಮಸ್ಥರಿಗೆ ಸೂಕ್ತ ರಕ್ಷಣೆ ಒದಗಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ವಾಲೆಚಂದ್ರಯ್ಯ, ನರಸಿಂಹಯ್ಯ, ಕೇಬಲ್ ರಘುಕುಮಾರ್, ಶಿವನಂಜಪ್ಪ, ಗಂಗಾಧರ್, ಸೋರೆಕುಂಟೆ ನಂದೀಶ್, ಗೋಪಾಲಕೃಷ್ಣ, ಜಯಮೂರ್ತಿ, ರಾಜೇಶ್, ಎನ್. ರಾಜಣ್ಣ, ಅಕ್ಷರ ದಾಸೋಹ ಶಿವಣ್ಣ, ರೂಪಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.




