ಹೋರಾಟಗಾರ ಸೊನಮ್ ವಾಂಗ್‌ಚುಕ್ ಅವರು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ತುಮಕೂರು ನಗರದ ತುಮಕೂರು ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಸಂಕೇತಿಕ ಮೌನ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕಳೆದ 21 ದಿನಗಳಿಂದ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಸೊನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹವು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ಭವಿಷ್ಯವನ್ನು ಕಾಪಾಡುವ ಹೋರಾಟವಾಗಿದೆ. ಈ ಹೋರಾಟಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿ, ಸೊನಮ್ ವಾಂಗ್‌ಚುಕ್ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳು ಹಾಗೂ ಸಂಶೋಧನಾರ್ಥಿಗಳು ಸೊನಮ್ ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸುತ್ತಿದ್ದು, ಕೇಂದ್ರ ಸರ್ಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ ದೇಶಾದ್ಯಂತ ಗಾಂಧಿವಾದಿ, ಅಹಿಂಸಾತ್ಮಕ ಚಳವಳಿಯನ್ನು ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ವಿರುದ್ಧ, ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದವರಿಗೆ ಯಾವುದೇ ರೀತಿಯ ವಿನಾಯಿತಿ ನೀಡಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಶೋಧನಾರ್ಥಿಗಳಾದ ರಾಹುಲ್, ಗಂಗಾಧರ್ ಬಾಣಸಂದ್ರ, ನವೀನ್ ಪೂಜಾರಹಳ್ಳಿ, ಅನಿಲ್ ಕುಮಾರ್, ಸುರೇಶ್, ರಂಗನಾಥ್, ಮಠಪತಿ, ಪಾತಲಿಂಗಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.





