ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಿರುವ ದಾಖಲೆ ರಹಿತ ಅರ್ಹ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಅಗತ್ಯ ದಾಖಲಾತಿಗಳನ್ನು ಕೂಡಲೇ ಸಂಗ್ರಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಕ್ಕುಪತ್ರ ವಿತರಣೆಗೆ ಅಗತ್ಯವಿರುವ ದಾಖಲಾತಿಗಳ ಸಂಗ್ರಹಣೆ ಹಾಗೂ ಸರ್ವೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,389 ಕುಟುಂಬಗಳಿಂದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಬೇಕಿದ್ದು, ಈವರೆಗೆ ಕೇವಲ 310 ಕುಟುಂಬಗಳ ದಾಖಲೆಗಳನ್ನು ಮಾತ್ರ ಪಡೆಯಲಾಗಿದೆ. ಉಳಿದ ಕುಟುಂಬಗಳಿಂದ ವಿಳಂಬ ಮಾಡದೆ ವಾಸಸ್ಥಳಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಗುರುತಿನ ಚೀಟಿಗಳನ್ನು ಸಂಗ್ರಹಿಸಬೇಕು. ಯಾವುದೇ ಅರ್ಹ ಕುಟುಂಬವು ದಾಖಲಾತಿಗಳ ಕೊರತೆಯಿಂದ ಹಕ್ಕುಪತ್ರ ಪಡೆಯುವ ಅವಕಾಶದಿಂದ ವಂಚಿತವಾಗಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಹಕ್ಕುಪತ್ರ ವಿತರಣಾ ಪ್ರಕ್ರಿಯೆ ಯಶಸ್ವಿಯಾಗಲು ಸಾರ್ವಜನಿಕರು, ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅರ್ಹ ಕುಟುಂಬಗಳಿಗೆ ಅಗತ್ಯ ಮಾಹಿತಿ ನೀಡಿ, ದಾಖಲೆಗಳನ್ನು ಸಲ್ಲಿಸಲು ಸಾರ್ವಜನಿಕ ಸಂಘಟನೆಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ಸರ್ವೆ ಪೂರ್ಣಗೊಂಡಿರುವ ಸ್ಲಂ ಪ್ರದೇಶಗಳ ಕುಟುಂಬವಾರು ಮಾಹಿತಿಯನ್ನು ಸಿದ್ಧಪಡಿಸಿ, ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ತಹಶೀಲ್ದಾರರಿಗೆ ಸಲ್ಲಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಸಂಘಟನೆಗಳ ಪ್ರತಿನಿಧಿಗಳು ಮರಳೂರು ದಿಣ್ಣೆ, ಭಾರತಿನಗರ ಹಾಗೂ ಎಸ್.ಎನ್. ಪಾಳ್ಯ ಪ್ರದೇಶಗಳಲ್ಲಿ ಸರ್ವೆ ಕಾರ್ಯ ಬಾಕಿ ಉಳಿದಿರುವುದನ್ನು ಸಭೆಯ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿಗಳು, ಬಾಕಿ ಇರುವ ಸರ್ವೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.




