ರಾಜ್ಯ ಸರ್ಕಾರ ಯುವಜನರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಭಾರತ್ ಜೋಡೋ ಯುವ ಸಂಘಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಯುವಕರು ನೋಂದಾಯಿಸಿಕೊಳ್ಳಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ ಮನವಿ ಮಾಡಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗ ಸೇರಿದಂತೆ ವಿವಿಧ ಕಾರಣಗಳಿಂದ ಯುವಜನರು ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸುತ್ತಿದ್ದು, ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದರು.
ತುಮಕೂರು ಜಿಲ್ಲೆ ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿರುವುದು ಶ್ಲಾಘನೀಯ. ಜಾತ್ಯತೀತ ಹಾಗೂ ಪಕ್ಷಾತೀತವಾಗಿ ನಡೆಯುತ್ತಿರುವ ಸರ್ಕಾರದ ಈ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಹಾಗೂ ನಗರ ಪ್ರದೇಶಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲು ಅವಕಾಶ ಕಲ್ಪಿಸಲಾಗಿದೆ. 100 ಸದಸ್ಯರನ್ನು ಒಳಗೊಂಡ ಪ್ರತಿ ಸಂಘಕ್ಕೆ ವಾರ್ಷಿಕ ₹10 ಲಕ್ಷ ಅನುದಾನ ನೀಡುವ ಮೂಲಕ ಯುವಜನರನ್ನು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಉತ್ತೇಜಿಸಲಾಗುತ್ತಿದೆ ಎಂದರು.
ಯುವಜನರ ವಿಕಾಸ, ಸಾಮಾಜಿಕ ಸಾಮರಸ್ಯ, ಸಮುದಾಯಗಳ ಅಭಿವೃದ್ಧಿ, ಕ್ರೀಡೆ, ದೈಹಿಕ ಚಟುವಟಿಕೆ ಹಾಗೂ ಕೌಶಲ್ಯಾಭಿವೃದ್ಧಿಗೆ ಸಂಘಗಳು ವೇದಿಕೆಯಾಗಲಿವೆ. ಈ ಅವಕಾಶವನ್ನು ಯುವಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ನಿಖಿಲ್ ರಾಜಣ್ಣ ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಇದುವರೆಗೆ ಗ್ರಾಮೀಣ ಭಾಗದಲ್ಲಿ 329 ಹಾಗೂ ನಗರ ಪ್ರದೇಶದಲ್ಲಿ ಸುಮಾರು 39 ಭಾರತ್ ಜೋಡೋ ಯುವ ಸಂಘಗಳು ರಚನೆಯಾಗಿವೆ. ಗ್ರಾಮೀಣ ಭಾಗದಲ್ಲಿ 11,700 ಹಾಗೂ ನಗರ ಪ್ರದೇಶದಲ್ಲಿ ಸುಮಾರು 12 ಸಾವಿರ ಯುವಕರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿಗೆ ಆ.31 ಕೊನೆಯ ದಿನವಾಗಿದ್ದು, ಹೆಚ್ಚಿನ ಯುವಕರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ ವಿಸ್ತರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.
ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಇಲಾಹಿ ಸಿಖಂದರ್ ಮಾತನಾಡಿ, ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿ ಯುವಜನರ ಸಮಸ್ಯೆಗಳನ್ನು ಅರಿಯುವ ಪ್ರಯತ್ನ ಮಾಡಿದರು. ನಿರುದ್ಯೋಗದ ಜತೆಗೆ ಯುವಕರ ಕಲೆ, ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಭಾರತ್ ಜೋಡೋ ಯುವ ಸಂಘಗಳ ಉದ್ದೇಶವಾಗಿದೆ ಎಂದರು.
ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವ ಗುಣ ಬೆಳೆಸುವುದರ ಜೊತೆಗೆ ಸಾಮಾಜಿಕ ಸಾಮರಸ್ಯ, ಕ್ರೀಡೆ, ಕೌಶಲ್ಯಾಭಿವೃದ್ಧಿ ಹಾಗೂ ಜನಪರ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಶಶಿಧರ್, ಮಣಿಕಂಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.




