ಕನ್ನಡದ ಉಳಿವು ಸವಾಲಾಗಿರುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಆದರೆ ಶಿಕ್ಷಣ ಇಲಾಖೆಯ ಅಧಿಕಾರಿಶಾಹಿ ಧೋರಣೆಯಿಂದ ಕನ್ನಡ ಸಂಕಷ್ಟಕ್ಕೆ ಸಿಲುಕಿದೆ ಎಂದು ಹಿರಿಯ ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದರು.
ತುಮಕೂರು ನಗರದ ಕನ್ನಡ ಭವನದಲ್ಲಿ ಕನ್ನಡ ಮಾಧ್ಯಮ ಮೀಸಲಾತಿ ಜಾರಿಯಾಗಿ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕನ್ನಡಪರ ಚಿಂತನ ವೇದಿಕೆ ಆಯೋಜಿಸಿದ್ದ ‘ಕನ್ನಡ ಮಾಧ್ಯಮ ಮೀಸಲಾತಿ–25 ವರ್ಷ: ಚಿಂತನ ಸಮಾವೇಶ’ ದಲ್ಲಿ ಅವರು ಮಾತನಾಡಿದರು.
ರಾಜ್ಯ ಶಿಕ್ಷಣ ನೀತಿಯನ್ನು ಸರ್ಕಾರ ಬಹಿರಂಗಪಡಿಸಿ, ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಿ ಖಚಿತವಾಗಿ ರೂಪಿಸಬೇಕು. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ ವ್ಯಕ್ತವಾಗಿದ್ದರೂ, ಶಿಕ್ಷಣ ಇಲಾಖೆಯ ಅಧಿಕಾರಿಶಾಹಿ ಹಿಂಬಾಗಿಲಿನಿಂದ ಅದನ್ನು ಜಾರಿಗೊಳಿಸಲು ಮುಂದಾಗಿದೆ. ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸದೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವುದು ವಂಚನೆಯಾಗಿದೆ ಎಂದು ಆರೋಪಿಸಿದರು.
ತಮ್ಮ ಅವಧಿಯಲ್ಲಿ ಜಾರಿಗೊಂಡ 1ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ವೃತ್ತಿಪರ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಶೇ.5ರಷ್ಟು ಮೀಸಲಾತಿ ಲಕ್ಷಾಂತರ ಮಂದಿಗೆ ಅನುಕೂಲವಾಗಿದೆ. ಈ ಮೀಸಲಾತಿಯನ್ನು ಶೇ.20ಕ್ಕೆ ಹೆಚ್ಚಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮನೆ ಹೇಳಿದರು.
ಹಳ್ಳಿಗಳಲ್ಲಿರುವ ಕಿರಿಯ ಪ್ರಾಥಮಿಕ ಶಾಲೆಗಳು ಕೇವಲ ಶಿಕ್ಷಣ ಕೇಂದ್ರಗಳಲ್ಲ; ಅವು ಗ್ರಾಮೀಣ ಸಂಸ್ಕೃತಿ ಹಾಗೂ ಸಾಮಾಜಿಕ ಚಟುವಟಿಕೆಗಳ ಕೇಂದ್ರಗಳಾಗಿವೆ. ಆದ್ದರಿಂದ ಇಂತಹ ಶಾಲೆಗಳನ್ನು ಉಳಿಸಿ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕನ್ನಡ ಬೋಧನೆಗೆ ಕನ್ನಡ ವಿಷಯದಲ್ಲಿ ಪದವಿ ಪಡೆದ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆದರೆ ಕರ್ನಾಟಕದಲ್ಲೇ ಕನ್ನಡ ಭಾಷೆಯನ್ನು ಕಡೆಗಣಿಸಲಾಗುತ್ತಿದೆ. ಕನ್ನಡ ಶಾಲೆಗಳನ್ನು ಉನ್ನತೀಕರಿಸಿ, ಕನ್ನಡಪರ ಶಿಕ್ಷಣ ನೀತಿಯನ್ನು ರೂಪಿಸುವ ಮೂಲಕ ನಾಡಿನ ಸಾಂಸ್ಕೃತಿಕ ಮತ್ತು ಸಾಮಾಜಿಕ ಅಸ್ಮಿತೆಯನ್ನು ಕಾಪಾಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಕನ್ನಡ ಉಳಿವಿಗೆ ಸರ್ಕಾರದ ಮಟ್ಟದಲ್ಲಿ ಅಗತ್ಯ ನೀತಿ-ನಿಯಮಗಳನ್ನು ರೂಪಿಸಬೇಕು. ಮುಖ್ಯಮಂತ್ರಿ ಹಾಗೂ ಸಚಿವರೊಂದಿಗೆ ಸಭೆ ನಡೆಸಿ ಕನ್ನಡಪರ ಚಿಂತಕರ ಸಲಹೆಗಳನ್ನು ಸರ್ಕಾರದ ಗಮನಕ್ಕೆ ತಂದು ಕಾರ್ಯರೂಪಕ್ಕೆ ತರುವ ಪ್ರಯತ್ನ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮನೆ, ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್. ನಟರಾಜ್, ಡಾ. ಶಮಾ ಬಿ.ಆರ್., ದೇವಲ ನಾಯ್ಕ್, ಡಾ. ಟಿಪ್ಪು ಸುಲ್ತಾನ್, ಕೆ.ಎಸ್. ಮಧುಸೂದನ್ ಸೇರಿದಂತೆ ಸಾಹಿತಿಗಳು, ಚಿಂತಕರು ಹಾಗೂ ಕನ್ನಡ ಮಾಧ್ಯಮ ಮೀಸಲಾತಿಯ ಫಲಾನುಭವಿಗಳು ಭಾಗವಹಿಸಿದ್ದರು.




