ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಆಧಾರ್ ಸೀಡಿಂಗ್ ಮಾಡದೆ ಪಾವತಿಸುವಲ್ಲಿ ವಿಳಂಬ ಮಾಡಿರುವ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಅಧಿಕಾರಿಗಳು ಮೈ ಬಗ್ಗಿಸಿ ಕೆಲಸ ಮಾಡಬೇಕು ಎಂದು ಚಾಟಿ ಬೀಸಿದರು.
ಜಿಲ್ಲಾ ಪಂಚಾಯ್ತಿಯಲ್ಲಿ ಶುಕ್ರವಾರ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಾಲಾ ಶಿಕ್ಷಣ ಇಲಾಖೆಯು ಪರಿಶಿಷ್ಟ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಬಾಕಿ ಇರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಆಧಾರ್ ಸೀಡಿಂಗ್ ಯಾಕೆ ವಿಳಂಬವಾಯಿತು, ನಿಮ್ಮ ನಿರ್ಲಕ್ಷ್ಯಕ್ಕೆ ಏನು ಹೇಳಬೇಕು. ಶಿಕ್ಷಣ ಇಲಾಖೆ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಂಡು ಕೆಲಸ ಮಾಡಿದರೆ ವಾರದಲ್ಲಿ ಪೂರ್ಣಗೊಳ್ಳುತ್ತದೆ. ವಿದ್ಯಾರ್ಥಿಗಳ ಶಿಷ್ಯವೇತನ ವಿಷಯದಲ್ಲಿ ಇಂತಹ ಉದಾಸೀನತೆ ಸರಿಯಲ್ಲ, ಈ ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಶಿಕ್ಷಣ ಇಲಾಖೆಗೆ ಬಿಡುಗಡೆಯಾದ ಅನುದಾನಗಳು ವೆಚ್ಚವಾಗದಿರುವುದನ್ನು ಗಮನಿಸಿದ ಅವರು, ಕ್ರಿಯಾ ಯೋಜನೆ ಮಾಡದೆ, ಆಡಳಿತಾತ್ಮಕ ಅನುಮೋದನೆ ಪಡೆದಿಲ್ಲ. ಹಾಗಾಗಿ ಅನುದಾನ ವೆಚ್ಚವಾಗದೆ ಉಳಿದಿದೆ. ಅಧಿಕಾರಿಗಳು ಈ ಬಗ್ಗೆ ಸರಿಯಾದ ಮಾಹಿತಿಯನ್ನೂ ಇಟ್ಟುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ತುಮಕೂರು | 100 ಹಳ್ಳಿಗಳಲ್ಲಿ ನೀರಿಗೆ ತತ್ವಾರ; ತೀವ್ರ ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ : ಡಾ ಜಿ. ಪರಮೇಶ್ವರ
ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದು. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಈ ಬಗ್ಗೆ ಗಮನ ಹರಿಸಬೇಕು ಎಂದರು.
ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಮುನ್ನ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಕಾಯ್ದಿರಿಸಿಕೊಳ್ಳಬೇಕು. ರೈತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ತುಮಕೂರು ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದರು.
ರೇಷ್ಮೆ ಇಲಾಖೆ, ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯ್ತಿ ಇಂಜಿನಿಯರಿಂಗ್ ವಿಭಾಗ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಬಿ.ವಿ.ಅಶ್ವಿಜ ಹಾಗೂ ಅಧಿಕಾರಿಗಳು ಇದ್ದರು.




