2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವದ ಗುರಿ ಸಾಕಾರಗೊಳ್ಳುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರು ಕೇವಲ ಉದ್ಯೋಗಾಕಾಂಕ್ಷಿಗಳಾಗದೆ, ಹೊಸ ಆಲೋಚನೆ, ಸೃಜನಶೀಲತೆ ಮತ್ತು ನಾಯಕತ್ವದ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಜವಾಬ್ದಾರಿಯುತ ನಾಯಕರಾಗಿ ರೂಪುಗೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕಲಾ ನಿಕಾಯದ ಡೀನ್ ಪ್ರೊ. ಪರಶುರಾಮ ಕೆ.ಜಿ. ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ‘ವಿಕಸಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್–2027’ರ ಪವರ್ ಪಾಯಿಂಟ್ ಪ್ರೆಸೆಂಟೇಷನ್ (PPT) ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನರಲ್ಲಿ ಇಂದಿನ ಸಾಮಾಜಿಕ, ಆರ್ಥಿಕ ಹಾಗೂ ಅಭಿವೃದ್ಧಿ ಸಂಬಂಧಿತ ಸಮಸ್ಯೆಗಳನ್ನು ವಿಶ್ಲೇಷಿಸುವ ಸಾಮರ್ಥ್ಯ ಬೆಳೆಸುವುದು ಮತ್ತು ನವೀನ ಚಿಂತನೆಗೆ ಪ್ರೋತ್ಸಾಹ ನೀಡುವುದು ಇಂತಹ ಸ್ಪರ್ಧೆಗಳ ಪ್ರಮುಖ ಉದ್ದೇಶವಾಗಿದೆ. ಯುವಕರು ತಮ್ಮ ಪ್ರತಿಭೆ ಮತ್ತು ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಮಂಡಿಸುವುದರ ಜೊತೆಗೆ ದೇಶದ ಭವಿಷ್ಯದ ಕುರಿತು ಸ್ಪಷ್ಟ ದೃಷ್ಟಿಕೋನ ಹೊಂದಬೇಕು ಎಂದರು.
ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಸಂಶೋಧನಾ ಕೇಂದ್ರದ ಹಿರಿಯ ಪ್ರಾಧ್ಯಾಪಕ ಪ್ರೊ. ಬಸವರಾಜ ಜಿ. ಮಾತನಾಡಿ, ವಿಕಸಿತ ಭಾರತ ಪರಿಕಲ್ಪನೆಯು ಕೇವಲ ಆರ್ಥಿಕ ಬೆಳವಣಿಗೆಗೆ ಸೀಮಿತವಾಗಿಲ್ಲ. ಶಿಕ್ಷಣ, ಆರೋಗ್ಯ, ತಂತ್ರಜ್ಞಾನ, ಕೃಷಿ, ಉದ್ಯೋಗ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಸಮಾನತೆ ಸೇರಿದಂತೆ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಒಳಗೊಂಡಿದೆ. ಈ ಗುರಿ ಸಾಧನೆಗೆ ಯುವಜನರ ಚಿಂತನೆ, ಸಂಶೋಧನೆ ಮತ್ತು ಕ್ರಿಯಾಶೀಲ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ತಿಳಿಸಿದರು.
ಯುವಕರು ತಮ್ಮ ವಿಚಾರಗಳನ್ನು ಏಕಮುಖವಾಗಿ ಮಂಡಿಸುವುದಕ್ಕೆ ಸೀಮಿತವಾಗದೆ, ಸಂವಾದದ ಮೂಲಕ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಬೇಕು. ಸಮಾಜ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ತಮ್ಮ ಆಲೋಚನೆ, ಪ್ರತಿಭೆ ಹಾಗೂ ನಾಯಕತ್ವದ ಗುಣಗಳನ್ನು ಸಮರ್ಥವಾಗಿ ಬಳಸಿಕೊಂಡು ಸದೃಢ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು. ದೇಶದ ಅಭಿವೃದ್ಧಿಯ ಕುರಿತು ಮಾತನಾಡುವುದಷ್ಟೇ ಅಲ್ಲದೆ, ಅದರ ಭಾಗವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯನ್ನು ಯುವಜನರು ಅರಿತುಕೊಳ್ಳಬೇಕು ಎಂದು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಪ್ರೊ. ನಾಗಭೂಷಣ ಬಗ್ಗನಡು ಸ್ವಾಗತಿಸಿದರು. ಅನಿತಾ ವಂದಿಸಿದರು. ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಸುದೀಪ್ ಕುಮಾರ್ ಆರ್. ಉಪಸ್ಥಿತರಿದ್ದರು.



