ಕಟ್ಟಡದ ಪಿಲ್ಲರ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಶಾಲಾ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ. ಬಾಲಕನ ತಲೆ ಮೇಲೆ ಏಕಾಏಕಿ ಪಿಲ್ಲರ್ ಕುಸಿದ ಪರಿಣಾಮ ಆತನ ತಲೆ ಬುರುಡೆ ಛಿದ್ರವಾಗಿದೆ.
ಇಂದು ಬೆಳಗ್ಗೆ ಶಾಲೆಗೆ ಆಗಮಿಸಿದ್ದ ಬಾಲಕ, ಶಾಲೆಯ ಸಮೀಪದಲ್ಲಿರುವ ನಂದಿನಿ ಡೈರಿ ಕಟ್ಟಡದ ಬಳಿ ಆಟವಾಡುತ್ತಿದ್ದ. ಈ ವೇಳೆ, ಕಟ್ಟಡದ ಪಿಲ್ಲರ್ ಕುಸಿದು ಆತನ ತಲೆಯ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಧನುಷ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಕಾಡಾನೆ ದಾಳಿಗೆ ಕಾರ್ಮಿಕ ಬಲಿ: ಜನವರಿಯಿಂದ ಈವರೆಗೆ 8 ಮಂದಿ ಸಾವು
ಈ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಜಿ ಸಚಿವ ಮಾಧುಸ್ವಾಮಿ ಕೂಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಟ್ಟಡದ ನಿರ್ವಹಣೆ ಇಲ್ಲದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.




