ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನವೆಂಬರ್ 15ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು ಎಂದು ಶಾಸಕ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿದ ಬಿ ವೈ ವಿಜಯೇಂದ್ರ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
“ನವೆಂಬರ್ 15ರ ಬುಧವಾರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಸವರಾಜು ಬೊಮ್ಮಾಯಿ, ಸದಾನಂದಗೌಡರು, ಮಾಜಿ ಉಪಮುಖ್ಯಮಂತ್ರಿಗಳಾದ ಕೆ ಎಸ್ ಈಶ್ವರಪ್ಪ, ಗೋವಿಂದ ಕಾರಜೋಳ, ಅಶೋಕ್, ಬಸವನಗೌಡ ಪಾಟೀಲ್ ಯತ್ನಾಳ್, ವಿ. ಸೋಮಣ್ಣ ಸೇರಿದಂತೆ ಎಲ್ಲ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕಾರ ಮಾಡಲಾಗುವುದು” ಎಂದು ತಿಳಿಸಿದರು.
“ರಾಜ್ಯಾಧ್ಯಕ್ಷರಾಗಿದ್ದ ನಳೀನ್‍ಕುಮಾರ್ ಕಟೀಲ್ ಅವರು ಯಶಸ್ವಿಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಕಟ್ಟಿದ್ದಾರೆ. ನಳಿನ್‍ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಅವರ ಸಲಹೆ, ಸೂಚನೆಗಳೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತೇನೆ” ಎಂದರು.
“ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಹಾಗೆಯೇ ಶುಕ್ರವಾರದೊಳಗೆ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯನ್ನೂ ಕರೆಯಲಿದ್ದೇವೆ. ರಾಜ್ಯದ ರೈತರನ್ನು ಕಾಡುತ್ತಿರುವ ಬರಕ್ಕೆ ಯಾವ ರೀತಿ ಪರಿಹಾರ ಮಾಡಬೇಕು ಎಂಬುದರ ಬಗ್ಗೆ ಪಕ್ಷದ ಮುಖಂಡರೊಂದಿಗೆ ಕುಳಿತು ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.
“ಮಾಜಿ ಸಚಿವ ಮಾಧುಸ್ವಾಮಿ ಅವರ ಕಾಲಿಗೆ ಸಮಸ್ಯೆಯಾಗಿದೆ. ಹಾಗಾಗಿ ಅವರು ಬಂದಿಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುತ್ತೇನೆ. ಹಾಗೆಯೇ ಕಾಂಗ್ರೆಸ್ ಮುಖಂಡರು ನಮ್ಮ ಮೇಲಿನ ಪ್ರೀತಿಯಿಂದ ಸಲಹೆ ನೀಡುತ್ತಾರೆ. ಹಿರಿಯ ಮುಖಂಡರು ನೀಡುವ ಒಳ್ಳೆಯ ಸಲಹೆಯನ್ನು ಕೇಳುವುದರಲ್ಲಿ ತಪ್ಪೇನಿದೆ” ಎಂದು ಸುದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಆಯ್ಕೆ ಚುನಾವಣಾ ಗಿಮಿಕ್: ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ
“ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸೈಡ್‍ಲೈನ್ ಮಾಡಲಾಗಿಲ್ಲ. ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿರಬಹುದು. ಎಲ್ಲವನ್ನು ಬದಿಗಿಟ್ಟು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಪ್ರಯತ್ನಿಸುತ್ತೇವೆ. ವಿರೋಧ ಪಕ್ಷ ನಾಯಕನ ಆಯ್ಕೆ ಬಳಿಕ ಕೇಂದ್ರ ನಾಯಕರನ್ನು ಭೇಟಿ ಮಾಡಿ ಮುಂದೆ ಯಾವ ರೀತಿ ನಡೆ ಇರಬೇಕೆಂಬ ಬಗ್ಗೆ ಸಲಹೆ ಪಡೆಯಲಾಗುವುದು” ಎಂದು ಹೇಳಿದರು.