ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ, ಯುವಜನ ವಿರೋಧಿ ನೀತಿಗಳನ್ನು ಖಂಡಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 26ರಿಂದ 28ರವರೆಗೆ 72 ಗಂಟೆಗಳ ಬೃಹತ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಎ ಗೋವಿಂದರಾಜು ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ರೈತರಿಗೆ, ಕಾರ್ಮಿಕರಿಗೆ ಕೊಟ್ಟ ಭರವಸೆಯನ್ನು ಈಡೇರಿಸದೆ ಮಾತಿಗೆ ತಪ್ಪಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ರೈತರು, ಕಾರ್ಮಿಕರು, ಯುವಜನರು ಈ ಹೋರಾಟದಲ್ಲಿ ಭಾಗಿಯಾಗುತ್ತಿದ್ದು, ಇದಕ್ಕಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರೈತ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಸಭೆ, ಕರಪತ್ರ ಹಂಚಿಕೆ, ಜಾಗೃತಿ ಸಭೆಗಳನ್ನು ನಡೆಸಲಾಗಿದೆ” ಎಂದರು.
“ಕೇಂದ್ರದಲ್ಲಿರುವ ನೆರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಗ್ರಿವಾಜ್ಞೆಯ ಮೂಲಕ ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳನ್ನು ರೈತರ 13 ತಿಂಗಳ ನಿರಂತರ ಹೋರಾಟ ಮತ್ತು 780 ಮಂದಿ ರೈತರು ಹುತಾತ್ಮರಾದ ಬಳಿಕ ಕಾಯ್ದೆಯನ್ನು ಹಿಂಪಡೆದ ಸರ್ಕಾರ, ಆ ಸಂದರ್ಭದಲ್ಲಿ ಕಾನೂನಾತ್ಮಕ ಬೆಂಬಲ ಬೆಲೆ ಕಾಯ್ದೆ ತರುವುದು ಮತ್ತು ವಿದ್ಯುತ್ ಖಾಸಗೀಕರಣ ಕಾಯ್ದೆ ಕೈಬಿಡುವ ಭರವಸೆ ನೀಡಿತ್ತು. ಆದರೆ ಈವರೆಗೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿಲ್ಲ. ಹಾಗಾಗಿ ಕೇಂದ್ರದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.
“ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದ ಕೃಷಿ ಕಾಯ್ದೆಗಳನ್ನು ಇಡೀ ದೇಶದಲ್ಲಿ ಮೊದಲ ಬಾರಿಗೆ ಬಿ ಎಸ್ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಜಾರಿಗೆ ತಂದಿದ್ದರು. ಇದರ ವಿರುದ್ದ ಹೋರಾಟ ಆರಂಭವಾದಾಗ ಅಂದು ವಿರೋಧಪಕ್ಷದ ನಾಯಕರಾಗಿದ್ದ ಇಂದಿನ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ಅವರು, ಹೋರಾಟಗಾರರೊಂದಿಗೆ ಬೆಂಬಲ ಸೂಚಿಸಿ, ಸಭೆಗಳಲ್ಲಿ ಪಾಲ್ಗೊಂಡು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಭರವಸೆ ನೀಡಿದ್ದರು. ಆದರೆ ಸರ್ಕಾರ ಬಂದು ಐದು ತಿಂಗಳು ಕಳೆದರೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಹಾಗಾಗಿ ರಾಜ್ಯ ಸರ್ಕಾರದ ವಿರುದ್ಧವೂ ಹೋರಾಟ ನಡೆಯಲಿದೆ” ಎಂದರು.
“ಕಾರ್ಮಿಕರು ದೇಶದ ಆಸ್ತಿ. ದಿನದ 24 ಗಂಟೆಗಳಲ್ಲಿ 8 ಗಂಟೆ ದುಡಿಮೆಗೆ ಅವಕಾಶವಿತ್ತು. ಆದರೆ ಅದನ್ನು 12 ಗಂಟೆಗೆ ಹೆಚ್ಚಿಸಲಾಗಿದೆ. ಇದು ಅಂತಾರಾಷ್ಟ್ರೀಯ ಕಾರ್ಮಿಕ ಕಾಯ್ದೆಗೆ ವಿರುದ್ದವಾಗಿದೆ. ಅಲ್ಲದೆ ಕಾರ್ಮಿಕರ ಪರವಾಗಿದ್ದ ಸುಮಾರು 44 ಕಾಯ್ದೆಗಳನ್ನು ರದ್ದು ಮಾಡಿ, ಆ ಜಾಗದಲ್ಲಿ 4 ಬಂಡವಾಳಶಾಹಿ ಪರ ಸಂಹಿತೆಗಳನ್ನು ಜಾರಿಗೆ ತರಲಾಗಿದೆ. ಇದರ ವಿರುದ್ದ ಕಾರ್ಮಿಕರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ರೈತ ಸಂಘ ಹೋರಾಟದಲ್ಲಿ ಪಾಲ್ಗೊಳ್ಳಲಿದೆ” ಎಂದು ಮಾಹಿತಿ ನೀಡಿದರು.
“ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಕೊಬ್ಬರಿಯೂ ಒಂದು. ಕಳೆದ ವರ್ಷ ಕ್ವಿಂಟಲ್‌ಗೆ ₹19,000 ಇದ್ದ ಕೊಬ್ಬರಿ ಬೆಲೆ ಇದು ₹8,500ಕ್ಕೆ ಇಳಿದಿದೆ. ಸರ್ಕಾರ ₹11,730 ಬೆಂಬಲ ಬೆಲೆ ಘೋಷಣೆ ಮಾಡಿದ್ದರೂ ಮುಕ್ತ ಮಾರುಕಟ್ಟೆಯಲ್ಲಿ ಅದಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಕೊಬ್ಬರಿ ಕೊಳ್ಳಲಾಗುತ್ತಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ವೇಳೆಯಲ್ಲಿಯೂ ಅಂದಿನ ಕೆಪಿಸಿಸಿ ಅಧ್ಯಕ್ಷ ಹಾಗೂ ಇಂದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಮ್ಮ ಸರ್ಕಾರ ಬಂದರೆ ಕ್ವಿಂಟಲ್ ಕೊಬ್ಬರಿಗೆ ₹15,000 ನೀಡುವ ಘೋಷಣೆ ಮಾಡಿ, ಕೊಟ್ಟ ಮಾತಿಗೆ ತಪ್ಪಿದ್ದಾರೆ. ಅಲ್ಲದೆ ಬಗರ್ ಹುಕುಂ ಸಾಗುವಳಿ ಚೀಟಿ, ಅರಣ್ಯ ಭೂಮಿ ಅಕ್ರಮ-ಸಕ್ರಮ, ಬರಪರಿಹಾರ, ಗ್ರಾಮೀಣ ಉದ್ಯೋಗ ಖಾತ್ರಿ ಸೇರಿದಂತೆ ಹಲವಾರು ಅಂಶಗಳನ್ನು ಮುಂದಿಟ್ಟುಕೊಂಡು ನಿರಂತರ 72 ಗಂಟೆಗಳ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ. ರೈತರು, ವಿದ್ಯಾರ್ಥಿಗಳು, ಯುವಜನರು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬರ ಅಧ್ಯಯನ ನಡೆಸಿದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಶಂಕರಪ್ಪ, ಸಂಘಟನಾ ಕಾರ್ಯದರ್ಶಿ ರವೀಶ್, ಜಿಲ್ಲಾ ಮಹಿಳಾ ಅಧ್ಯಕ್ಷೆ ನಾಗರತ್ನಮ್ಮ, ಕೆ ಎನ್ ವೆಂಕಟೇಗೌಡ, ಪಾವಗಡ ಪೂಜಾರಪ್ಪ, ಚಿಕ್ಕಬೋರೇಗೌಡ, ನರಸಿಂಹಮೂರ್ತಿ, ಲೋಕೇಶ್, ಅರಕೆರೆ ಮಂಜು, ಭಾಗ್ಯಮ್ಮ ಹಾಗೂ ಎಲ್ಲ ತಾಲೂಕು ಅಧ್ಯಕ್ಷರು, ಕಾರ್ಯದರ್ಶಿಗಳು ಇದ್ದರು.