ಗುಬ್ಬಿ ಪಟ್ಟಣದ ಮುದುಗೆರೆ ಯಿಂದ ಹೇರೂರು ಚತುಷ್ಪಥ ರಸ್ತೆವರೆಗೆ ಕೈಗೆತ್ತಿಕೊಳ್ಳಲಾಗಿರುವ ವೈಟ್ ಟಾಪಿಂಗ್ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಮತ್ತು ತಾಲೂಕು ಆಡಳಿತ ಈ ಸಮಸ್ಯೆ ಪರಿಹರಿಸಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗುಬ್ಬಿ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ. ಲೋಕೇಶ್ ಒತ್ತಾಯಿಸಿದ್ದಾರೆ.
ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಈ ಕಾಮಗಾರಿಯ ಮುಖ್ಯ ಭಾಗದಲ್ಲೇ ಸುಮಾರು ಅರ್ಧ ಕಿಲೋಮೀಟರ್ ಉದ್ದದ ರಸ್ತೆಗೆ ಕಾಂಕ್ರೀಟ್ ಹಾಕದೆ ಹಾಗೆಯೇ ಬಿಡಲಾಗಿದೆ. ಕಳೆದ ನಾಲ್ಕು ತಿಂಗಳಿಂದ ಈ ಭಾಗದಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗುಬ್ಬಿ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ. ಲೋಕೇಶ್ ತಿಳಿಸಿದ್ದಾರೆ.
ಕಾಮಗಾರಿ ಅಪೂರ್ಣಗೊಂಡಿರುವುದರಿಂದ ರಸ್ತೆಯಲ್ಲಿ ಧೂಳು ಹೆಚ್ಚಾಗಿದ್ದು, ಅಲ್ಲಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸವಾರರು, ಪಾದಚಾರಿಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದೆ. ಧೂಳಿನಿಂದ ಸಾರ್ವಜನಿಕರ ಆರೋಗ್ಯದ ಮೇಲೂ ಪರಿಣಾಮ ಬೀರುವ ಆತಂಕವಿದ್ದು, ಗುಂಡಿಗಳಿಂದ ಅಪಘಾತ ಸಂಭವಿಸುವ ಭೀತಿ ಎದುರಾಗಿದೆ.
ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿರುವುದರಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಯನ್ನು ಪರಿಹರಿಸಬೇಕು. ಸ್ಥಗಿತಗೊಂಡಿರುವ ಕಾಮಗಾರಿಯನ್ನು ತಕ್ಷಣ ಪುನರಾರಂಭಿಸಿ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿ.ಜಿ. ಲೋಕೇಶ್ ಒತ್ತಾಯಿಸಿದ್ದಾರೆ.
ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತಿದ್ದು, ಅಪೂರ್ಣ ಕಾಮಗಾರಿಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ





