ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆ, 44 ನಿಗಮ, ಮಂಡಳಿಗಳಿಗೆ ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ನಿಗಮ, ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ.
ಕಾರ್ಯಕರ್ತರನ್ನು ಒಳಗೊಂಡ ಹೊಸ ಪಟ್ಟಿ ಸಿದ್ದಗೊಳಿಸಿದ ಪಟ್ಟಿಯಲ್ಲಿ ಬೀದರ್ ಜಿಲ್ಲೆಯ ಇಬ್ಬರಿಗೆ ನಿಗಮ, ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ಸಿಕ್ಕಿದೆ
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರನ್ನು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಸವಕಲ್ಯಾಣದ ಮಾಜಿ ಶಾಸಕ ಬಿ. ನಾರಾಯಣರಾವ್ ಅವರ ಪತ್ನಿ ಮಾಲಾ ಬಿ.ನಾರಾಯಣರಾವ್ ಅವರನ್ನು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಈ ಸುದ್ದಿ ಓದಿದ್ದೀರಾ? ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ತಡೆಯಾಜ್ಞೆ ವಿಧಿಸಿದ್ದ ಜಿಲ್ಲಾಡಳಿತ: ತೆರವುಗೊಳಿಸಿದ ಹೈಕೋರ್ಟ್
ಬಸವರಾಜ ಜಾಬಶೆಟ್ಟಿ ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಟೋಕರೆ ಕೋಳಿ (ಕಬ್ಬಲಿಗ) ಸಮುದಾಯಕ್ಕೆ ಸೇರಿದವರಾದ ಮಾಲಾ ಬಿ.ನಾರಾಯಣ ಅವರು 2021ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಸ್ಫರ್ಧಿಸಿ ಸೋಲು ಕಂಡಿದ್ದರು. ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅಲ್ಲದೇ ದಿವಂಗತ ಮಾಜಿ ಶಾಸಕ ಬಿ.ನಾರಾಣರಾವ್ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
