ಮಹೇಂದ್ರ ಥಾರ್ ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಹಾಗೂ ಕೆಂದನಹಳ್ಳಿ ಮಧ್ಯೆ ಗುರುವಾರ ರಾತ್ರಿ ಸುಮಾರು 8.30 ಗಂಟೆ ಸಮಯದಲ್ಲಿ ನಡೆದಿದೆ.
ಚಿಂತಾಮಣಿ ತಾಲ್ಲೂಕಿನ ಕೈವಾರ ಹೋಬಳಿಯ ತಳಗವಾರ ಗ್ರಾಮದ ಅರ್ಜುನ್(30) ಮತ್ತು ಪುನೀತ್(21) ಮೃತ ದುರ್ದೈವಿಗಳು.
ಅರ್ಜುನ್ ಮತ್ತು ಪುನೀತ್ ಇಬ್ಬರು ರಾಯಲ್ ಎನ್‌ಫೀಲ್ಡ್ ದ್ವಿಚಕ್ರ ವಾಹನದಲ್ಲಿ ಚಿಂತಾಮಣಿ ಕಡೆಯಿಂದ ತಳಗವಾರ ಗ್ರಾಮದ ಕಡೆ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಬಂದ ಮಹೇಂದ್ರ ಥಾರ್ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಡಿವೈಎಸ್ಪಿ ಮುರಳಿಧರ್, ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿಸಲಾಗಿದೆ.
ಇದನ್ನೂ ಓದಿ : ಬೆಂ.ಗ್ರಾಮಾಂತರ | ಮುಹೂರ್ತದ ವೇಳೆ ಹೊರನಡೆದ ವರ; ಕುಟುಂಬ ಕಂಗಾಲು
ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಘಟನೆಯ ಮಾಹಿತಿ ಪಡೆದು ಸೂಕ್ತ ಕ್ರಮಕ್ಕೆ ಸೂಚಿಸಿದರು.