ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಜಿಲ್ಲಾಡಳಿತ ಸಜ್ಜಾಗಿದೆ.
ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ, ಉಡುಪಿ ಜಿಲ್ಲೆಯಲ್ಲಿ 272 ಶಾಲೆಗಳಿಂದ ಒಟ್ಟು 7411 -ಗಂಡು, 6742- ಹೆಣ್ಣು, ಒಟ್ಟು 14,153 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆಯಲು ಸಮರ್ಪಕ ಪೀಠೋಪಕರಣದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲಾ 51 ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಓ.ಆರ್.ಎಸ್.. ಶುದ್ಧ ಕುಡಿಯುವ ನೀರು ಹಾಗೂ ಪ್ರಥಮ ಚಿಕಿತ್ಸೆಗಾಗಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗಿದ್ದು ಪ್ರಶ್ನೆ ಪತ್ರಿಕೆಗಳನ್ನು ಸಂರಕ್ಷಿಸಿಡಲು ಜಿಲ್ಲಾ ಖಜಾನೆ ಉಡುಪಿ ಹಾಗೂ 2 ತಾಲೂಕು ಖಜಾನೆಗಳಲ್ಲಿ ಪೋಲೀಸ್ ಪಹರೆಯೊಂದಿಗೆ ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಉತ್ತರ ಪತ್ರಿಕೆಗಳನ್ನು ಪಡೆಯಲು ಜಿಲ್ಲೆಯಲ್ಲಿ ಒಟ್ಟು 22 ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಪರೀಕ್ಷೆಯನ್ನು ನಡೆಸಲು ಜಿಲ್ಲೆಯಲ್ಲಿ ಒಟ್ಟು 1013 ಪರೀಕ್ಷಾ ಸಿಬ್ಬಂದಿಯನ್ನು ನೇಮಿಸಲಾಗಿದೆ.
ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳ, ಮೊಬೈಲ್ ಸ್ವಾದೀನಾಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರಿಗೆ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು ಇವರ ನಿರ್ದೇಶನದಂತೆ ಪರೀಕ್ಷಾ ಅವ್ವವಹಾರವನ್ನು ತಡೆಗಟ್ಟಲು ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ 590 ಕೊಠಡಿಗಳ ಸಿಸಿಟಿವಿ ವೀಕ್ಷಣೆಗಾಗಿ ವೆಬ್ ಕಾಸ್ಟಿಂಗ್ ನಡೆಸಲು 12 ಅಧಿಕಾರಿ/ ಸಿಬ್ಬಂದಿಗಳ ತಂಡವನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ರಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಮತ್ತು ಬಿಸಿಯೂಟದ ವ್ಯವಸ್ಥೆಯನ್ನು 51 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರಕಾರ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯಲು ಜಿಲ್ಲಾ ಮಟ್ಟದ 03 ತಂಡಗಳು ಮತ್ತು ವಲಯ ಮಟ್ಟದಲ್ಲಿ ವಿಚಕ್ಷಣಾ ದಳವನ್ನು ಪ್ರತೀ ತಾಲೂಕಿಗೆ ಒಂದರಂತೆ ನೇಮಿಸಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯವನ್ನು ಹೊಗಲಾಡಿಸಲು ಈಗಾಗಲೇ ಜಿಲ್ಲೆಯ ಎಲ್ಲಾ 51 ಪರೀಕ್ಷಾ ಕೇಂದ್ರಗಳಲ್ಲಿ ಅಣುಕು ಪರೀಕ್ಷೆಯನ್ನು ನಡೆಸಲಾಗಿದೆ.
ಪ್ರತಿಯೊಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ತನಕ 144 ರ ಪ್ರತಿಬಂಧಕಾಜ್ಞೆಯನ್ನು ಪರೀಕ್ಷಾ ದಿನಗಳಲ್ಲಿ ಹೊರಡಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ನಿಯಾಮಾನುಸಾರ ಅಗತ್ಯ ಸಾಮಾಗ್ರಿಗಳನ್ನು ಕೊಂಡೊಯ್ಯಬಹುದಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಸ್ಮಾರ್ಟ್ ವಾಚ್, ಮೊಬೈಲ್ ಪೋನ್, ಬ್ಲೂಟೂತ್. ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ನಿಷೇಧಿಸಲಾಗಿದೆ. ಎಲ್ಲಾ ಪರೀಕ್ಷಾ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭದ ಒಂದು ಗಂಟೆ ಮುಂಚಿತವಾಗಿ ತೆರಳಿ, ನೋಂದಣಿ ಸಂಖ್ಯೆ ಮತ್ತು ಕೊಠಡಿ ಸಂಖ್ಯೆಯನ್ನು ಪರಿಶೀಲಿಸುವುದು.
ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಸಿಬ್ಬಂದಿಯನ್ನು ಹೊರತುಪಡಿಸಿ, ಸಾರ್ವಜನಿಕರಿಗೆ/ಪೋಷಕರಿಗೆ/ಮಾಧ್ಯಮದವರಿಗೆ ಪ್ರವೇಶವಿರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಪೋನ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.
ಇನ್ ಸ್ಟಾಗ್ರಾಮ್, ಫೇಸ್ ಬುಕ್, ಮತ್ತು ವಾಟ್ಸ್ ಆಪ್ ಹಾಗೂ ಇತರೆ ಸಾಮಾಜಿಕ ಜಾಲತಾಣದ ಮೂಲಕ ಬರುವ ಸುಳ್ಳು ಸುದ್ದಿಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬಾರದು. ಎಲ್ಲಾ ಪರೀಕ್ಷಾ ಅಭ್ಯರ್ಥಿಗಳು ಯಾವುದೇ ಭಯವಿಲ್ಲದೇ, ಒತ್ತಡರಹಿತವಾಗಿ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸುವಂತೆ ಸೂಚಿಸಿದರು