ಉಡುಪಿ ಜಿಲ್ಲೆಯಲ್ಲಿ ಮೇ 26ರ ವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಮೇ 21ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು. ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಅರಬಿ ಸಮುದ್ರದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆ ಗಾಳಿ ಹಿನ್ನೆಲೆ ಬಂದರಿನಲ್ಲಿ ಕೆಲವು ಮೀನುಗಾರಿಕಾ ಬೋಟುಗಳು ಲಂಗರು ಹಾಕಿವೆ.