ಉಡುಪಿ ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆ ಹಾಗೂ ಸದಸ್ಯತ್ವ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಯುವಜನರನ್ನು ತಳಮಟ್ಟದ ಆಡಳಿತದಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು.
ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಭಾರತ್ ಜೋಡೊ ಯುವ ಸಂಘದ ಮಾರ್ಗದರ್ಶಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಗ್ರಾಮ ಪಂಚಾಯತ್ ಮತ್ತು ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಯುವಕರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸುವ ಮೂಲಕ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಜಿಲ್ಲೆಯಾದ್ಯಂತ ಜನಸಂಖ್ಯೆಗೆ ಅನುಗುಣವಾಗಿ ಯುವ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದ್ದು, ನೋಂದಣಿ ಪ್ರಕ್ರಿಯೆಯಲ್ಲಿ ಮಾರ್ಗದರ್ಶಕರ ಪಾತ್ರ ಮಹತ್ವದ್ದಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಪ್ರತಿಯೊಂದು ಸಂಘವೂ ನೋಂದಣಿಯಾಗುವಂತೆ ಕ್ರಮ ವಹಿಸಬೇಕು. ಈಗಾಗಲೇ ನೋಂದಣಿಯಾಗಿರುವ ಸಂಘಗಳ ವಿವರಗಳನ್ನು ಕ್ಯೂಆರ್ ಕೋಡ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಪ್ರತಿ ಸಂಘದಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ 15 ಸದಸ್ಯರ ಆಂತರಿಕ ಕಾರ್ಯಕಾರಿ ಸಮಿತಿ ರಚಿಸಬೇಕು. ಇದರಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಚಿ ಹಾಗೂ 12 ಕಾರ್ಯಕಾರಿ ಸದಸ್ಯರು ಇರಲಿದ್ದು, ಮೀಸಲಾತಿ ನಿಯಮಗಳನ್ನೂ ಪಾಲಿಸಬೇಕು ಎಂದು ಸೂಚಿಸಿದರು.
ನಿಯಮಾನುಸಾರ ನೋಂದಣಿಯಾದ ಯುವ ಸಂಘಗಳಿಗೆ ಸರ್ಕಾರದಿಂದ ವಾರ್ಷಿಕ ತಲಾ 10 ಲಕ್ಷ ರೂ. ಅನುದಾನ ದೊರೆಯಲಿದೆ. ಈ ಅನುದಾನವನ್ನು ಸಾಮಾಜಿಕ ಸೇವೆ, ಪರಿಸರ ಮತ್ತು ಜಲ ಸಂರಕ್ಷಣೆ, ಆರೋಗ್ಯ, ಸ್ವಚ್ಛತೆ ಹಾಗೂ ಯುವ ಸಬಲೀಕರಣ ಸೇರಿದಂತೆ ವಿವಿಧ ಸಮಾಜಮುಖಿ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು. ಸಂಘಗಳ ನೋಂದಣಿಯೊಂದಿಗೆ ಬ್ಯಾಂಕ್ ಖಾತೆ ತೆರೆಯುವ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಬೇಕು ಎಂದರು.
ಯುವ ಸಂಘಗಳ ಸ್ಥಾಪನೆ ಮತ್ತು ಸದಸ್ಯತ್ವ ನೋಂದಣಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಅಧಿಕಾರಿಗಳು, ಸಿಬ್ಬಂದಿ, ಮಾರ್ಗದರ್ಶಕರು, ಮಾಸ್ಟರ್ ತರಬೇತುದಾರರು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕಾರ್ಯಗಳ ಮೇಲ್ವಿಚಾರಣೆಯನ್ನು ತಹಶೀಲ್ದಾರ್‌ಗಳು ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಸಂಯೋಜಕ ಡಾ. ಗಣನಾಥ್ ಶೆಟ್ಟಿ ಎಕ್ಕಾರು ಮಾತನಾಡಿ, ಯಾವುದೇ ಸಂಘಟನೆಯಲ್ಲಿ ಕಾರ್ಯನಿರ್ವಹಿಸುವವರು ಅದರ ಕಾರ್ಯವೈಖರಿಯನ್ನು ಸರಿಯಾಗಿ ಅರ್ಥಮಾಡಿಕೊಂಡಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆಯಲ್ಲಿ ಮಾರ್ಗದರ್ಶಕರು ಅಡಿಪಾಯದ ಸ್ತಂಭಗಳಿದ್ದಂತೆ. ಅವರು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳ 16ರಿಂದ 35 ವರ್ಷದೊಳಗಿನ ಯುವಜನರಲ್ಲಿ ಕ್ರೀಡೆ, ಆರೋಗ್ಯಕರ ಜೀವನಶೈಲಿ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವುದರ ಜತೆಗೆ ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೊಳ್ಳಿ, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ತಹಶೀಲ್ದಾರ್‌ಗಳಾದ ಅನಂತ ಶಂಕರ್ ಬಿ., ರಾಕೇಶ್ ಫ್ರಾನ್ಸಿಸ್ ವಿಕ್ಟರ್, ಅಶೋಕ್ ಭಟ್, ಮಾಸ್ಟರ್ ತರಬೇತುದಾರರು ಹಾಗೂ ಮೆಂಟರ್‌ಗಳು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.






