ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ (ರಿ.) ಬೈಂದೂರು ವತಿಯಿಂದ ರತ್ತು ಬಾಯಿ ಜನತಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆಯುವ ‘ಅಕ್ಷರ ಬೆಳಕು’ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ದಲಿತ ಸಂಘರ್ಷ ಸಮಿತಿ (ದ.ಸಂ.ಸ.) ಸಂಘಟನಾ ಸಂಚಾಲಕ ಮಂಜುನಾಥ ನಾಗೂರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘವು ಸತತ ನಾಲ್ಕು ವರ್ಷಗಳಿಂದ ಪ್ರತಿವರ್ಷ ನಾಲ್ವರು ಅರ್ಹ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು, ಅವರ ಶಿಕ್ಷಣ ಮುಂದುವರಿಸಲು ಅಗತ್ಯವಾದ ಆರ್ಥಿಕ ನೆರವು ಹಾಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ದಲಿತ ಸಂಘರ್ಷ ಸಮಿತಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ವಿನಯ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ಪ್ರಕಾಶ್ ಎಂ. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ರದೀಪ್ ಕುಮಾರ್ ಜಿ.ಎಂ. ಅವರು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾ ಕಲಿಕೆ, ಕೌಶಲ್ಯಾಭಿವೃದ್ಧಿ ಹಾಗೂ ವ್ಯಾಕರಣದ ಮಹತ್ವದ ಕುರಿತು ಉಪಯುಕ್ತ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ಬೈಂದೂರು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಶಿವರಾಜ್ ಬೈಂದೂರು ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ದ.ಸಂ.ಸ. ಜಿಲ್ಲಾ ಮಹಿಳಾ ಒಕ್ಕೂಟದ ಸಂಘಟನಾ ಸಂಚಾಲಕಿ ಗೀತಾ ಸುರೇಶ್ ಕುಮಾರ್ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು. ಸದಸ್ಯೆ ಶಕಿಲಾ ವಂದಿಸಿದರು.





