ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ ಸುರಿದು, ಹೋಮ ನಡೆಸಿ ಶುದ್ಧೀಕರಿಸಿದ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಶಾಖೆ ಹಾಗೂ ಸಹಬಾಳ್ವೆ ವತಿಯಿಂದ ನಾಳೆ (ಆ.26) ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಆ.26ರಂದು ಸಂಜೆ 5 ಗಂಟೆಗೆ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಯಲಿದೆ. ದೇಶದ ಪ್ರಮುಖ ರಾಜಕೀಯ ನಾಯಕರಲ್ಲಿ ಒಬ್ಬರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಸ್ಪೃಶ್ಯತೆ ಆಚರಣೆಯ ಮೂಲಕ ಅವಮಾನ ಮಾಡಲಾಗಿದೆ ಎಂದು ಆರೋಪಿಸಿರುವ ಸಂಘಟನೆಗಳು, ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿವೆ.
ಅಸ್ಪೃಶ್ಯತೆ ಹಾಗೂ ಮನುವಾದಿ ಮನೋಭಾವದ ವಿರುದ್ಧ ಧ್ವನಿ ಎತ್ತುವ ಉದ್ದೇಶದಿಂದ ನಡೆಯುವ ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹಾಗೂ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಮನವಿ ಮಾಡಿದ್ದಾರೆ.





